ADVERTISEMENT

ಸಾರ್ವಜನಿಕವಾಗಿ ಬೆದರಿಕೆ ಆರೋಪ: ಎನ್‌.ರವಿಕುಮಾರ್ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 26 ಮೇ 2025, 15:01 IST
Last Updated 26 ಮೇ 2025, 15:01 IST
ಎನ್‌.ರವಿಕುಮಾರ್‌
ಎನ್‌.ರವಿಕುಮಾರ್‌   

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ದತ್ತಾತ್ರೇಯ ಇಕ್ಕಳಕಿ ಅವರು ನೀಡಿದ ದೂರಿನ ಅನ್ವಯ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ–ಎಸ್‌ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನಗರದಲ್ಲಿ ಈಚೆಗೆ ಬಿಜೆಪಿಯ ಪ್ರತಿಭಟನೆ ನಡೆಯಿತು. ರವಿಕುಮಾರ್ ಅವರು ತಮ್ಮ ಭಾಷಣದಲ್ಲಿ ‘ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬುದು ಖಚಿತವಾಗಿಲ್ಲ. ಶಹಾಬಾದ್ ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐಗಳಾದ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ಅವರು ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದಾರೆ’ ಎಂದು ಹೇಳಿಕೆ ಕೊಟ್ಟಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ADVERTISEMENT

‘ರವಿಕುಮಾರ್ ಮುಸ್ಲಿಮರ ವಿರುದ್ಧ ದ್ವೇಷವನ್ನು ಹುಟ್ಟು ಹಾಕಿ, ಪೊಲೀಸ್ ಅಧಿಕಾರಿಗಳನ್ನು ಗುಲಾಮರು ಎಂದು ಅವಹೇಳನಕಾರಿ ಪದ ಬಳಸಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.