ADVERTISEMENT

ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2018, 13:25 IST
Last Updated 21 ಡಿಸೆಂಬರ್ 2018, 13:25 IST
ಶಶೀಲ್ ಜಿ.ನಮೋಶಿ
ಶಶೀಲ್ ಜಿ.ನಮೋಶಿ   

ಕಲಬುರ್ಗಿ: ‘ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ರಾಜ್ಯ ಸಹ ವಕ್ತಾರ ಶಶೀಲ್ ಜಿ.ನಮೋಶಿ ಆಗ್ರಹಿಸಿದರು.

‘ರಕ್ಷಣಾ ಇಲಾಖೆಗೆ ಸಂಬಂಧಿಸಿದ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ. ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ. ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದರೂ ರಾಹುಲ್ ಗಾಂಧಿ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಹಗರಣಗಳನ್ನು ಮಾಡಿದೆ. ಹೀಗಾಗಿ ಅವರಿಗೆ ಇದರಲ್ಲೂ ಹಗರಣ ನಡೆದಿರಬಹುದು ಎಂಬ ಸಂಶಯ ಉಂಟಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ದೇಶದ ಜನತೆಗೆ ಸತ್ಯಾಂಶ ಗೊತ್ತಾಗಿದೆ. ಈಗಲಾದರೂ ರಾಹುಲ್ ಆರೋಪ ಮಾಡುವುದುನ್ನು ಬಿಡಬೇಕು’ ಎಂದರು.

ADVERTISEMENT

‘ಸಾಲ ಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಸರಿಯಾಗಿ ಚರ್ಚೆ ನಡೆಸಿಲ್ಲ. ರೈತರ ಸಾಲ ಮನ್ನಾ ಆಗಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಹಕಾರ ಬ್ಯಾಂಕುಗಳಲ್ಲಿನ ₹50 ಸಾವಿರ ಸಾಲ ಮನ್ನಾ ಮಾಡಲಾಗಿದ್ದು, ಆ ಹಣವೇ ₹600 ಕೋಟಿ ಬಾಕಿ ಉಳಿದುಕೊಂಡಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಡಿಸಿಸಿ ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಧಿಸಿದಂತೆ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ನೇತೃತ್ವದಲ್ಲಿ ಅಮರಾಣಂತ ಸತ್ಯಾಗ್ರಹ ನಡೆಸಲಾಗಿತ್ತು. ಸತ್ತವರ ಹೆಸರಿನಲ್ಲಿ ಸಾಲ ನೀಡಲಾಗಿದ್ದು, ಆ ಪಟ್ಟಿಯನ್ನು ನೀಡುವಂತೆ ಒತ್ತಾಯಿಸಲಾಗಿತ್ತು. ಆದರೆ, ಇದುವರೆಗೂ ಪಟ್ಟಿ ನೀಡಿಲ್ಲ. ಇನ್ನೊಂದು ವಾರ ಕಾದು ನೋಡಿ ಮತ್ತೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ರಾಜ್ಯ ಸಹ ಸಂಚಾಲಕ ಸುಭಾಷ ರಾಠೋಡ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಬಿರಾದಾರ, ಮಾಧ್ಯಮ ಪ್ರಮುಖ ಸಂಗಣ್ಣ ಇಜೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.