ADVERTISEMENT

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 16:04 IST
Last Updated 24 ಸೆಪ್ಟೆಂಬರ್ 2024, 16:04 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಮಂಗಳವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು         ಪ್ರಜಾವಾಣಿ ಚಿತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಮಂಗಳವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು         ಪ್ರಜಾವಾಣಿ ಚಿತ್ರ   

ಕಲಬುರಗಿ: ‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಮುಡಾ’ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಎತ್ತಿ ಹಿಡಿದಿದೆ. ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಇದರಿಂದ ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಇಂತಹ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾಗೊಂಡಿದ್ದು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

ಹಗರಣದ ಪ್ರಕರಣವು ನ್ಯಾಯಾಲಯದಲ್ಲಿ ಇರುವುದರಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಂತಹ ಉನ್ನತ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ. ನೈತಿಕತೆ ಇದ್ದರೆ ಕೂಡಲೇ ಸಿಎಂ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಬಸವರಾಜ ಮತ್ತಿಮಡು, ಗ್ರಾಮೀಣ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ರಾಜಕುಮಾರ ‍ಪಾಟೀಲ ತೇಲ್ಕೂರ, ಅಮರನಾಥ ಪಾಟೀಲ, ನಿತಿನ್ ಗುತ್ತೆದಾರ, ಅಂಬರಾಯ ಅಷ್ಟಗಿ, ಧರ್ಮಣ್ಣ ಇಟಗಾ, ಶರಣಪ್ಪ ತಳವಾರ, ಅಶೊಕ ಬಗಲಿ, ಶಿವಯೋಗಿ ನಾಗನಹಳ್ಳಿ, ಉಮೇಶ ಪಾಟೀಲ, ಚಂದಮ್ಮ ಪಾಟೀಲ, ಗೌರಿ ಚಿಚಕೊಟ, ಬಾಬುರಾವ್ ಹಾಗರಗುಂಡಗಿ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.