ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು
ಕಲಬುರಗಿ: ರಾಜ್ಯ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಗರ ಹಾಗೂ ಗ್ರಾಮೀಣ ಜಿಲ್ಲಾ ಘಟಕಗಳ ಅಧ್ಯಕ್ಷರು, ಹಾಲಿ ಹಾಗೂ ಮಾಜಿ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಜಾಥಾ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಮಾತನಾಡಿದ ಬಿಜೆಪಿ ಮುಖಂಡರು,
'ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಉದ್ದೇಶಿತ ಕಾಯ್ದೆಯು ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಲಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ' ಎಂದು ಆರೋಪಿಸಿದರು.
'ಈ ಮಸೂದೆಯು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ' ಎಂದು ವಾಗ್ದಾಳಿ ನಡೆಸಿದರು.
ಬಳಿಕ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.