ಕಲಬುರಗಿ: ‘ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಆಡಳಿತ ವೈಫಲ್ಯ, ಬೆಲೆ ಏರಿಕೆ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ 4 ಮೀಸಲಾತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಏಪ್ರಿಲ್ 18ರಂದು ಜನ ಆಕ್ರೋಶ ರ‍್ಯಾಲಿ ನಡೆಸಲಾಗುವುದು’ ಎಂದು ಬಿಜೆಪಿ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅಶೋಕ ಬಗಲಿ ತಿಳಿಸಿದರು.
‘ಅಂದು ಬೆಳಿಗ್ಗೆ 10ಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಗುವುದು. ಈ ವೇಳೆ 10 ಸಾವಿರ ಜನರು ಪಾಲ್ಗೊಳ್ಳುವರು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಈ ರ್‍ಯಾಲಿಯಲ್ಲಿ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುವರು’ ಎಂದರು.
ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ. ನಿತ್ಯ ಒಂದಲ್ಲಾ ಒಂದು ವಸ್ತುವಿನ ಬೆಲೆ ಏರಿಕೆ ಮಾತ್ರ ನಿಲ್ಲುತ್ತಿಲ್ಲ. ಉಸಿರಾಡುವ ಗಾಳಿ ಬಿಟ್ಟು ಎಲ್ಲದರ ಬೆಲೆ ಏರಿಕೆ ಮಾಡಿದ್ದಾರೆ’ ಎಂದು ಆರೋಪಿಸಿದರು.
ವಿಧಾನ ಪರಿಷತ್‌ನ ಮಾಜಿ ಸದಸ್ಯ ಅಮರನಾಥ ಪಾಟೀಲ ಮಾತನಾಡಿ, ‘ರಾಜ್ಯ ಸರ್ಕಾರವು ಜಾತಿಗಣತಿಯ ಮೂಲಕ ಜನರನ್ನು ತಪ್ಪು ದಾರಿಗೆ ತಂದು ನಿಲ್ಲಿಸಿದೆ. ಜಾತಿಗಣತಿಯಲ್ಲಿ 365 ಸಮುದಾಯಗಳ ಉಲ್ಲೇಖವಿಲ್ಲ. ಈ ಜಾತಿಗಣತಿ ವರದಿಯನ್ನು ಕೂಡಲೇ ತಡೆ ಹಿಡಿದು,ಶಿಸ್ತು ಬದ್ಧವಾಗಿ ಸಮೀಕ್ಷೆ ನಡೆಸಬೇಕು’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಮಾಧ್ಯಮ ಸಂಚಾಲಕ ಸಂತೋಷ ಹಾದಿಮನಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.