ADVERTISEMENT

ರೈತ ಹೋರಾಟ ಬೆಂಬಲಿಸಿ 26ರಂದು ಕರಾಳ ದಿನ

​ಪ್ರಜಾವಾಣಿ ವಾರ್ತೆ
Published 24 ಮೇ 2021, 3:08 IST
Last Updated 24 ಮೇ 2021, 3:08 IST
ಶರಣಬಸಪ್ಪ
ಶರಣಬಸಪ್ಪ   

ಕಲಬುರ್ಗಿ: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ಸಂಯುಕ್ತ ಹೋರಾಟ ಸಮಿತಿಯು ಇದೇ 26ರಂದು ಕರಾಳ ದಿನ ಆಚರಿಸಲು ಕರೆ ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಮಿತಿಯ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ, ‘ಅಂದು ಕರಾಳ ದಿನವನ್ನು ಮನೆ ಮನೆಗಳಲ್ಲಿ, ಹೊಲ, ತೋಟಗಳಲ್ಲಿ, ರೈತರು ಮತ್ತು ಕೃಷಿ ಕಾರ್ಮಿಕರ ನಡುವೆ ಕೆಲಸ ಮಾಡುವ ಸಂಸ್ಥೆಗಳು ಆಚರಿಸಬೇಕು ಎಂಬ ಸಂಯುಕ್ತ ಕಿಸಾನ್ ಮೋರ್ಚಾದ ಕರೆಯನ್ನು ಬೆಂಬಲಿಸಿ ಜಿಲ್ಲೆಯಲ್ಲಿಯೂ ಹೋರಾಟ ನಡೆಯಲಿದೆ. ಕೊರೊನಾ ಲಾಕ್‌ಡೌನ್ ಇದ್ದುದರಿಂದ ಪರಸ್ಪರ ಅಂತರವನ್ನು ಕಾಯ್ದುಕೊಂಡು ಈ ಚಳವಳಿ ನಡೆಯಲಿದೆ’ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಮತ್ತು ರೈತರು ಮತ್ತು ಕಾರ್ಮಿಕರು ಕಪ್ಪು ಧ್ವಜಗಳನ್ನು ಹಾರಿಸಬೇಕು. ಆ ಮೂಲಕ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು. ವಿದ್ಯುತ್ (ತಿದ್ದುಪಡಿ) ಮಸೂದೆ 2021ನ್ನು ಹಿಂತೆಗೆದುಕೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ₹ 600 ಕೂಲಿಯೊಂದಿಗೆ ಕನಿಷ್ಠ 200 ದಿನಗಳ ಕೆಲಸವನ್ನು ನೀಡಬೇಕು ಎಂಬ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.