ADVERTISEMENT

ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 13:06 IST
Last Updated 21 ಜನವರಿ 2021, 13:06 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ   

ಕಲಬುರ್ಗಿ: ‘ಏಳು ನೂತನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಹತ್ತು ಜನ ಸಚಿವರ ಖಾತೆ ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳಿಗೆ ಸಾಕಷ್ಟು ಆಡಳಿತ ಅನುಭವ ಇದೆ. ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಸಮಾಧಾನ ಪಡಿಸುತ್ತಾರೆ’ ಎಂದರು.

‘ಯಡಿಯೂರಪ್ಪ ಅವರ ಮೂರ್ನಾಲ್ಕು ದಶಕಗಳ ರಾಜಕೀಯ ಹೋರಾಟ ಮತ್ತು ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸರ್ಕಾರದಲ್ಲಿ ಯಾರ ಹಸ್ತಕ್ಷೇಪದ ಅಗತ್ಯವೂ ಬೀಳುವುದಿಲ್ಲ’ ಎಂದು ತಿಳಿಸಿದರು.

ADVERTISEMENT

ಬೆಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ ಕುರಿತು ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ‘ಹಿರಿಯ ಕಾಂಗ್ರೆಸ್ ಮುಖಂಡ ಬಿಜೆಪಿ ವೈಫಲ್ಯದ ಬಗ್ಗೆ ಜನರ ಮುಂದೆ ಇಡುತ್ತೇವೆ ಅಂತ ಹೇಳಿದ್ದಾರೆ. ಕಳೆದ ಉಪ‌ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲುವ ಮೂಲಕ ಹತಾಶರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಸ್ತಿತ್ವದ ಕಳೆದುಕೊಂಡು ಗಂಡಾಂತರದಲ್ಲಿ ಸಿಲುಕಿದೆ. ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕಿ ರೈತರನ್ನು ಎತ್ತಿ ಕಟ್ಟಲು ಮುಂದಾಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.