ADVERTISEMENT

ಜನವರಿಯಲ್ಲಿ ಯಡ್ರಾಮಿಗೆ ಮುಖ್ಯಮಂತ್ರಿ: ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 5:49 IST
Last Updated 19 ಡಿಸೆಂಬರ್ 2025, 5:49 IST
ಯಡ್ರಾಮಿ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮುಖ್ಯಮಂತ್ರಿ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದರು
ಯಡ್ರಾಮಿ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮುಖ್ಯಮಂತ್ರಿ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದರು   

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಲು ಜನವರಿಯಲ್ಲಿ ಯಡ್ರಾಮಿ ಪಟ್ಟಣಕ್ಕೆ ಮುಖ್ಯಮಂತ್ರಿ ಆಗಮಿಸುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಯಡ್ರಾಮಿ ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದರು.

ಕಲಬುರಗಿ ಉಪ ವಿಭಾಗಾಧಿಕಾರಿ ಸಾಹಿತ್ಯ, ಯಡ್ರಾಮಿ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಸೇರಿದಂತೆ ತಾಲ್ಲೂಕು ಅಧಿಕಾರಿಗಳೊಂದಿಗೆ ಯಡ್ರಾಮಿ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ ಆವರಣ ಸ್ಥಳ ಪರಿಶೀಲಿಸಿದ ಅವರು, ಯಾವುದೇ ಲೋಪವಿಲ್ಲದಂತೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು. ಅಲ್ಲದೇ ಹೆಲಿಪ್ಯಾಡ್ ಸ್ಥಳ ಪರಿಶೀಲಿಸಿದರು.

ತದನಂತರ ಯಡ್ರಾಮಿ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು. ಅಂಬೇಡ್ಕರ್‌ ವಸತಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಪ್ರಥಮಾದ್ಯತೆ ಮೇಲೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಗುಣಮಟ್ಟ ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು.

ಇದಕ್ಕೂ ಮುನ್ನ ಜವಳಗಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕೆಲಹೊತ್ತು ಚಿಣ್ಣರೊಂದಿಗೆ ಸಮಯ ಕಳೆದರು. ಆಲೂರು ಗ್ರಾಮದ ಕಾಟನ್‌ ಮಾರುಕಟ್ಟೆಗೆ ಭೇಟಿ ನೀಡಿ ಹತ್ತಿ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಅರಳಗುಂಡಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ ಕುರಿತು ರೋಗಿಗಳಿಂದ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.