ADVERTISEMENT

ಪೌರ ಕಾರ್ಮಿಕರಿನ್ನು ಪೌರ ನೌಕರರು: ಕೋಟೆ ಶಿವಣ್ಣ

ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳಿಗೆ ಅರಿವು ಜಾಗೃತಿ, ನಿಗಮದ ಸ್ವತ್ತು ವಿತರಣಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 5:48 IST
Last Updated 12 ಜನವರಿ 2023, 5:48 IST
ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳಿಗೆ ತಲಾ ₹2.50 ಲಕ್ಷ ಸಹಾಯಧನದ ಚೆಕ್ ವಿತರಿಸಲಾಯಿತು
ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳಿಗೆ ತಲಾ ₹2.50 ಲಕ್ಷ ಸಹಾಯಧನದ ಚೆಕ್ ವಿತರಿಸಲಾಯಿತು   

ಕಲಬುರಗಿ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಮೊದಲ ಹಂತದಲ್ಲಿ 11,133 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ. ಎರಡನೇ ಹಂತದಲ್ಲಿ ರಾಜ್ಯದ ಎಲ್ಲ ಪೌರ ಕಾರ್ಮಿಕರನ್ನು ಕಾಯಂಗೊಳಿಸಿ, ಅವರನ್ನು ‘ಪೌರ ನೌಕರರು’ ಎಂದು ಕರೆದು ಗೌರವಿಸಲು ನಿರ್ಧರಿಸಿದೆ’ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ತಿಳಿಸಿದರು.

ನಗರದ ಡಾ.ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಬುಧವಾರ ನಡೆದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳಿಗೆ ಅರಿವು ಜಾಗೃತಿ, ನಿಗಮದ ಸೌಲಭ್ಯ ಕುರಿತು ಕಾರ್ಯಾಗಾರ ಹಾಗೂ ನಿಗಮದ ಸ್ವತ್ತು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘2013ರ ನಂತರ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊ‌ಳಿಸಿ, ಅನುದಾನ ನೀಡುತ್ತಿವೆ. ಸಫಾಯಿ ಕರ್ಮಚಾರಿಗಳು ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು.

ADVERTISEMENT

‘ಮ್ಯಾನ್‌ಹೋಲ್‌ಗೆ ಇಳಿದು ರಾಜ್ಯ ದಲ್ಲಿ ಒಟ್ಟು 90 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಕೆಲ ವರ್ಷಗಳ ಹಿಂದೆ ಕಲಬುರಗಿಯಲ್ಲೂ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಇದು ಅನಿಷ್ಠ ಪದ್ಧತಿಯಾಗಿದ್ದು, ಇದರ ನಿರ್ಮೂಲನೆಗೆ ಸರ್ಕಾರಗಳು ಕಠಿಣ ಕ್ರಮ ಕೈಗೊಂಡಿವೆ’ ಎಂದರು.

‘ಸಫಾಯಿ ಕರ್ಮಚಾರಿಗಳಲ್ಲಿ ಅರಿವು ಮೂಡಿಸಲು ಆಯೋಗದಿಂದ ಸಾಕ್ಷ್ಯಚಿತ್ರ ತಯಾರಿಸುತ್ತಿದ್ದು, ಶೀಘ್ರ ದಲ್ಲೇ ಬಿಡುಗಡೆ ಮಾಡಲಿದ್ದೇವೆ’ ಎಂದು ಅವರು ತಿಳಿಸಿದರು.

ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ ಮಾತನಾಡಿ, ‘ಸಫಾಯಿ ಕರ್ಮಚಾರಿಗಳ ಪಾದಪೂಜೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಬದ್ಧವಾಗಿವೆ’ ಎಂದರು.

ನಗರದ ಗಾಜೀಂಪುರದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಭವನ ನಿರ್ಮಿಸಲು ₹ 1 ಕೋಟಿ ಅನುದಾನ ನೀಡುವಂತೆ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್ ಅವರಿಗೆ ಕಾರ್ಮಿಕರ ಪರವಾಗಿ ವೇದಿಕೆಯಲ್ಲೇ ಮನವಿ ಪತ್ರ ಸಲ್ಲಿಸಿದರು.

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಬಿ.ಮಲ್ಲಿಕಾರ್ಜುನ ಮಾತನಾಡಿದರು.

ಕಾರ್ಯಕ್ರಮದ ಆರಂಭಕ್ಕೂ ಮುನ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಲಾಯಿತು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭಾ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯೆ ಗೀತಾ ವಾಡೇಕರ್, ವಿಜಯಕುಮಾರ ಎನ್. ಅಡಕಿ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಅನೀಲ ಚಕ್ರೆ, ಶರಣು ಅತನೂರ, ಮ್ಯಾನುವಲ್ ಸ್ಕ್ಯಾವೆಂಜಿಂಗ್ ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ನರ್ಮದಾ ಹತ್ವಾಲ್, ರಾಜಕುಮಾರ ಗವಾರಿಯಾ, ಮಹಾನಗರ ಪಾಲಿಕೆಯ ಚವ್ಹಾಣ, ಮಹೇಶ ಗುತ್ತೇದಾರ, ಚೆನ್ನಬಸವ ಭಾಗವಹಿಸಿದ್ದರು. ನಿಗಮದ ಜಿಲ್ಲಾ ವ್ಯವಸ್ಥಾಪಕ ಸುಧೀರ ಡಿ.ಸಂಗೋಳಿಕರ ಸ್ವಾಗತಿಸಿದರು. ಡಾ.ರಾಜಶೇಖರ ಮಾಂಗ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.