ಸಿಪಿಎಂ
ಕಲಬುರಗಿ: ಪಕ್ಷದ ಗಮನಕ್ಕೆ ತರದೇ ಏಕಪಕ್ಷೀಯ ನಿರ್ಣಯ ಕೈಗೊಂಡು ಈಶಾನ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜಾವೇದ್ ಹುಸೇನ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದ್ದು, ಅವರ ಸದಸ್ಯತ್ವವನ್ನು ಅಮಾನತಿನಲ್ಲಿ ಇಡಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿಪಿಐ (ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ‘ಈಶಾನ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿರುವ ಪಕ್ಷೇತರ ಅಭ್ಯರ್ಥಿ ಎನ್. ಪ್ರತಾಪ್ ರೆಡ್ಡಿ ಅವರಿಗೆ ಪಕ್ಷ ಬೆಂಬಲಿಸಿದೆ. ಪಕ್ಷದ ರಾಜ್ಯ ಸಮಿತಿಯ ನಿರ್ಣಯಕ್ಕೆ ವಿರುದ್ಧವಾಗಿ ಹಾಗೂ ಪಕ್ಷದ ಗಮನಕ್ಕೆ ತರದೇ ಜಾವೇದ್ ಹುಸೇನ್ ಅವರು ಸ್ಪರ್ಧಿಸುವ ಮೂಲಕ ಶಿಸ್ತನ್ನು ಉಲ್ಲಂಘಿಸಿದ್ದಾರೆ. ರಾಜ್ಯ ಸಮಿತಿಯ ನಿರ್ಣಯವನ್ನು ಬೆಂಬಲಿಸುವಂತೆ, ನಾಮಪತ್ರ ಸಲ್ಲಿಸಿದಂತೆ ಸೂಚನೆ ನೀಡಿದರೂ ತಮ್ಮ ನಿರ್ಧಾರವನ್ನು ಬದಲಿಸಿಲ್ಲ. ಆದ್ದರಿಂದ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಅಲ್ಲಿಯವರೆಗೆ ಸದಸ್ಯತ್ವವನ್ನು ಅಮಾನತಿನಲ್ಲಿ ಇರಿಸಲಾಗುವುದು’ ಎಂದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಸಿಪಿಎಂ ಪಕ್ಷವು ಪರಿಷತ್ ಚುನಾವಣೆಯಲ್ಲಿ ತನ್ನ ನಿಲುವು ಬದಲಿಸಿ ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಿರುವುದು ಕುತೂಹಲ ಮೂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.