ADVERTISEMENT

ಕಲಬುರಗಿ | ಬೆಳೆ ಹಾನಿ: ಸಂಸದ, ಶಾಸಕರೊಂದಿಗೆ ಪ್ರಿಯಾಂಕ್ ಚರ್ಚೆ

ಒಂದೆರಡು ದಿನಗಳಲ್ಲಿ ಜಂಟಿ ಸಮೀಕ್ಷೆ ವರದಿ; ಬಳಿಕ ಪರಿಹಾರ ಬಿಡುಗಡೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 4:52 IST
Last Updated 2 ಸೆಪ್ಟೆಂಬರ್ 2025, 4:52 IST
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಜಿಲ್ಲೆಯ ಸಂಸದರು, ಶಾಸಕರ ಸಭೆಯಲ್ಲಿ ಮಾತನಾಡಿದರು
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಜಿಲ್ಲೆಯ ಸಂಸದರು, ಶಾಸಕರ ಸಭೆಯಲ್ಲಿ ಮಾತನಾಡಿದರು   

ಕಲಬುರಗಿ: ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲೆಯ ಸಂಸದರ ಹಾಗೂ ಶಾಸಕರ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದಾಗಿ ಆಗಿರುವ ಬೆಳೆಹಾನಿ ಹಾಗೂ ಈ ತಿಂಗಳ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಸಭೆಯಲ್ಲಿ ಸಚಿವರು ಚರ್ಚಿಸಿದರು.

ADVERTISEMENT

ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಆಗಸ್ಟ್‌ ತಿಂಗಳ ಅಂತ್ಯದವರೆಗೆ 699 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತಲೂ ಶೇ 49ರಷ್ಟು ಹೆಚ್ಚು ಮಳೆಯಾಗಿದೆ, ಸಾಮಾನ್ಯವಾಗಿ ಈ ಅವಧಿಯಲ್ಲಿ 468 ಮಿ.ಮೀ. ಮಳೆ ಆಗಬೇಕಿತ್ತು. ಜುಲೈ ಹಾಗೂ ಆಗಸ್ಟ್‌ ತಿಂಗಳಲ್ಲಿ ಹೆಚ್ಚು ಮಳೆ ಆಗಿರುವುದರಿಂದ ಬೆಳೆಹಾನಿಯಾಗಿದ್ದು, ಜಿಲ್ಲಾಧಿಕಾರಿ ಜಂಟಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ. ಒಂದೆರಡು ದಿನಗಳಲ್ಲಿ ವರದಿ ಕೈ ಸೇರಲಿದ್ದು, ನಂತರ ಪರಿಹಾರ ನೀಡುವ ಬಗ್ಗೆ ನಿರ್ಧರಿಸಲಾಗುವುದು. ಬೆಳೆ ನಷ್ಟದ ಬಗ್ಗೆ ವರದಿ ಬಂದ ನಂತರ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದೆಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸುವ ಬಗ್ಗೆ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲಾಯಿತು.

ಸಂಸದ ರಾಧಾಕೃಷ್ಣ ದೊಡ್ಡಮನಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ಕನೀಜ್‌ ಫಾತಿಮಾ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.