ADVERTISEMENT

ದೌರ್ಜನ್ಯ ಪ್ರಕರಣ: ತ್ವರಿತ ಪರಿಹಾರ ಕೊಡಿ; ಜಿಲ್ಲಾಧಿಕಾರಿ ಫೌಜಿಯಾ

ಎಸ್ಸಿ, ಎಸ್ಟಿ ದೌರ್ಜನ್ಯ ಮೇಲುಸ್ತುವಾರಿ ಸಮಿತಿ ಸಭೆ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 3:58 IST
Last Updated 17 ಜುಲೈ 2025, 3:58 IST
ಕಲಬುರಗಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್ ಮೀನಾ ಇದ್ದಾರೆ
ಕಲಬುರಗಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್ ಮೀನಾ ಇದ್ದಾರೆ   

ಕಲಬುರಗಿ: ‘ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣದಲ್ಲಿ ಕುಟುಂಬದ ಅವಲಂಬಿತ ಸದಸ್ಯರಿಗೆ ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದರು.
 
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು-1995ರನ್ವಯ ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರಕರಣದಲ್ಲಿ ಉದ್ಯೋಗಕ್ಕೆ ಬಾಕಿ ಇರುವ ಕಡತಗಳ ಬಗೆಗೆ ಒಂದು ವಾರದಲ್ಲಿ ಪ್ರಸ್ತಾವ ಸಲ್ಲಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಬಳಿಕ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಎಸ್ಸಿ, ಎಸ್ಟಿ ಕಾಯ್ದೆಯಡಿ ದಾಖಲಾದ್ದ ಪ್ರಕರಣಗಳ ಮಾಹಿತಿ ಪಡೆದರು.

ADVERTISEMENT

‘ಈ ಕಾಯ್ದೆಯಡಿ ಜಿಲ್ಲೆಯಲ್ಲಿ ಒಟ್ಟು 253 ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಒಟ್ಟು 6 ಪ್ರಕರಣಗಳು ತನಿಖಾ ಹಂತದಲ್ಲಿವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್ ಮೀನಾ, ಡಿಯುಡಿಸಿ ಯೋಜನಾ ನಿರ್ದೇಶಕ ಮುನವರ್‌ ದೌಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್, ಪೊಲೀಸ್‌ ಇಲಾಖೆ ಹಿರಿಯ ಅಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Quote - ಎಸ್ಸಿ ಎಸ್ಟಿ ಜನಾಂಗದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಮತ್ತು ಅಸ್ಪಶ್ಯತೆ ನಿವಾರಣೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಚನ್ನಪ್ಪ ಸುರಪೂರಕರ ಸಮಿತಿ ಸದಸ್ಯ

ಪೌರ ಕಾರ್ಮಿಕರಿಗೆ ಸುರಕ್ಷತಾ ಉಪಕರಣ ನೀಡಲು ಸೂಚನೆ

‘ಮ್ಯಾನ್‌ಹೋಲ್‌ ಮತ್ತು ಸ್ವಚ್ಛತಾ ಪೌರಕಾರ್ಮಿಕರಿಗೆ ಸುರಕ್ಷತಾ ಉಪಕರಣ ನೀಡಬೇಕು. ಜಟ್ಟಿಂಗ್ ಮತ್ತು ಸಕ್ಕಿಂಗ್ ಯಂತ್ರಗಳನ್ನು ಬಳಸಿ ಮ್ಯಾನ್‌ಹೋಲ್‌ಗಳನ್ನು ಸ್ವಚ್ಛಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚಿಸಿದರು. ‘ಪೌರಕಾರ್ಮಿಕರಿಗೆ ಸಂಬಳ ವಿತರಣೆಯಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.