ADVERTISEMENT

‘ಪ್ರವಾಹ ಎದುರಾದರೆ ತುರ್ತಾಗಿ ಸ್ಪಂದಿಸಿ’: ಜಿಲ್ಲಾಧಿಕಾರಿ ಬಿ.ಫೌಜಿಯ ತರನ್ನುಮ್‌

​ಪ್ರಜಾವಾಣಿ ವಾರ್ತೆ
Published 24 ಮೇ 2025, 12:50 IST
Last Updated 24 ಮೇ 2025, 12:50 IST
ಕಲಬುರಗಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್ ಮೀನಾ, ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಎಡಿಸಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ ಪಾಲ್ಗೊಂಡಿದ್ದರು
ಕಲಬುರಗಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್ ಮೀನಾ, ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಎಡಿಸಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ ಪಾಲ್ಗೊಂಡಿದ್ದರು   

ಕಲಬುರಗಿ: ‘ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದಾಗ ನೆರೆಹಾವಳಿ, ಪ್ರವಾಹ ಹಾಗೂ ಮನೆ ಹಾನಿ ಸಂದರ್ಭದಲ್ಲಿ ಅಧಿಕಾರಿಗಳು ತುರ್ತಾಗಿ ಪರಿಹಾರ ಒದಗಿಸಲು ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯ ತರನ್ನುಮ್‌ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಲಬುರಗಿ ಜಿಲ್ಲೆಯಲ್ಲಿ 2025–26ನೇ ಸಾಲಿನ ಮುಂಗಾರು ಮಳೆ ಅವಧಿಯ ಪೂರ್ವಸಿದ್ಧತೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿಯಿಂದ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ತ್ವರಿತವಾಗಿ ಸಾರ್ವಜನಿಕರ ರಕ್ಷಣೆಗೆ ಧಾವಿಸಬೇಕು. ಉಜನಿ ಜಲಾಶಯದಿಂದ ನೀರು ಬಿಟ್ಟಾಗ ಭೀಮಾನದಿಗೆ ಹೆಚ್ಚಿನ ಪ್ರಮಾಣ ಒಳಹರಿವು ಉಂಟಾಗುತ್ತದೆ. ಅಧಿಕಾರಿಗಳು ಜಾಗೃತರಾಗಿಬೇಕು. ಪ್ರತಿದಿನ ನೀರಿನ ಪ್ರಮಾಣ ಪರಿಶೀಲಿಸಬೇಕು’ ಎಂದರು.

ADVERTISEMENT

‘ಜಿಲ್ಲೆಯಲ್ಲಿ ಮಳೆಗಾಲದಲ್ಲಿ 153 ಹಳ್ಳಿಗಳಿಗೆ ಸಮಸ್ಯೆಯಾಗುವ ಸಂಭವ ಇರುತ್ತದೆ. ಇದಕ್ಕಾಗಿ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ತುರ್ತು ಅಗತ್ಯ ಸೇವೆಗಳ ಮಾಹಿತಿ ನೀಡಲು ಸಹಾಯವಾಣಿ ಸಂಖ್ಯೆಯನ್ನು ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ನೀಡಬೇಕು’ ಎಂದು ಸೂಚಿಸಿದರು.

‘ಸಂಭಾವ್ಯ ನೆರೆ ಹಾವಳಿ ತಡೆಗೆ ತಾಲ್ಲೂಕಿಗೊಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ ತಾಲ್ಲೂಕು ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ನಡೆಸಬೇಕು. ಸಂಭವಿಸಬಹುದಾದ ಅನಾಹುತಗಳ ತಡೆಗೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ನೀಡಬೇಕು’ ಎಂದು ನಿರ್ದೇಶನ ನೀಡಿದರು.

‘ವಿಶೇಷವಾಗಿ ಮಳೆಗಾಲದಲ್ಲಿ ನೀರು ಕಲುಷಿತವಾಗಿ ಹಲವು ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ. ಹೀಗಾಗಿ ಆರೋಗ್ಯ ಇಲಾಖೆ ಹೆಚ್ಚಿನ ಗಮನ ಹರಿಸಬೇಕು’ ಎಂದು ಡಿಎಚ್‌ಒ ಡಾ.ಶರಣಬಸಪ್ಪ ಖ್ಯಾತನಾಳ ಅವರಿಗೆ ಸೂಚಿಸಿದರು.

ಕೃಷಿ ಇಲಾಖೆ, ಜೆಸ್ಕಾಂ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಗಳ ಅಧಿಕಾರಿಗಳಿಂದ ಮಳೆಗಾಲದ ಸಿದ್ಧತೆ ಬಗೆಗೆ ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್‌ ಮೀನಾ, ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್, ಡಿಯುಡಿಸಿ ಯೋಜನಾ ನಿರ್ದೇಶಕ ಮುನಾವರ್‌ ದೌಲಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಇನಾಂದಾರ, ಡಿಎಚ್ಒ ಡಾ.ಶರಣಬಸಪ್ಪ ಖ್ಯಾತನಾಳ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.