ADVERTISEMENT

ವಾಡಿ: ಅಂಬೇಡ್ಕರ್ ಸ್ಮಾರಕಕ್ಕೆ ಹೆಚ್ಚುವರಿ ಅನುದಾನ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 7:14 IST
Last Updated 26 ಫೆಬ್ರುವರಿ 2026, 7:14 IST
ವಾಡಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಸ್ಮಾರಕ ಸಂಗ್ರಹಾಲಯ, ಸಂಶೋಧನಾ ಕೇಂದ್ರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಮನವಿ ಪತ್ರ ಸಲ್ಲಿಸಲಾಯಿತು
ವಾಡಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಸ್ಮಾರಕ ಸಂಗ್ರಹಾಲಯ, ಸಂಶೋಧನಾ ಕೇಂದ್ರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಮನವಿ ಪತ್ರ ಸಲ್ಲಿಸಲಾಯಿತು   

ವಾಡಿ: ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ, ವಸ್ತು ಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ನಿರ್ಮಾಣ ಹೋರಾಟ ಸಮಿತಿಯಿಂದ ಆಗ್ರಹಿಸಲಾಯಿತು.

ಈ ಕುರಿತು ಸಮಿತಿಯ ರಾಜ್ಯ ಕಾರ್ಯದರ್ಶಿ ವಿಕ್ರಮ್ ತೇಜಸ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರವನ್ನು ಮಂಗಳವಾರ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಸಲ್ಲಿಸಿದ ಅವರು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ವಾಡಿ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ, ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ ನಿರ್ಮಾಣಕ್ಕೆ 10 ಎಕರೆ ಭೂಮಿ ಮಂಜೂರು ಮಾಡಿ ₹3 ಕೋಟಿ ಅನುದಾನ ನೀಡಿದೆ.

ADVERTISEMENT

ಮುಂದುವರೆದು, ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕದ ಭಾಗವಾಗಿ ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ, ಅತ್ಯಾಧುನಿಕ ಅಂತರರಾಷ್ಟ್ರೀಯ ಗ್ರಂಥಾಲಯ ನಿರ್ಮಾಣ, ಉದ್ಯಾನ ವನ, ಬೌದ್ಧದಮ್ಮ ಅಧ್ಯಯನ ಕೇಂದ್ರ, ಸಭಾಂಗಣ ಬಾಬಾ ಸಾಹೇಬರು ಸ್ಥಳೀಯರೊಂದಿಗೆ ತೆಗೆಸಿಕೊಂಡ ಭಾವಚಿತ್ರದ ಬೃಹತ್ ಪ್ರತಿಮೆ ನಿರ್ಮಾಣ, ಪರಿಶಿಷ್ಟ ಸಮುದಾಯದ ವಿದ್ಯಾರ್ಥಿ ಯುವಜನರಿಗಾಗಿ ಕೌಶಲ ತರಬೇತಿ ಕೇಂದ್ರ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳ ನಿರ್ಮಾಣ, ಅಂಬೇಡ್ಕರ್ ಸಂಶೋಧನಾ ಗ್ರಂಥ ರಚನೆಗಾಗಿ ₹10 ಲಕ್ಷ ಅನುದಾನ ಸಹಿತ ಇನ್ನಿತರ ಉದ್ದೇಶಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ₹25 ಕೋಟಿ ಮೀಸಲಿಟ್ಟು ಅಭಿವೃದ್ಧಿ ಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಮಾ ದೊಡ್ಡಮನಿ, ರವಿ ಕೋಳಕೂರ, ಸಿದ್ದರಾಮ ನಡಗೇರಿ, ಮೈಲಾರಿ ದೊಡ್ಡಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.