ADVERTISEMENT

ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ

ಪೌರ ನೌಕರರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಮೇ 2025, 13:49 IST
Last Updated 6 ಮೇ 2025, 13:49 IST
ಅಫಜಲಪುರ ಪುರಸಭೆಯ ಕಚೇರಿ ಮುಂದೆ ಪೌರ ನೌಕರರು ತೋಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು
ಅಫಜಲಪುರ ಪುರಸಭೆಯ ಕಚೇರಿ ಮುಂದೆ ಪೌರ ನೌಕರರು ತೋಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು   

ಅಫಜಲಪುರ: ‘ಪೌರಕಾರ್ಮಿಕರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಅವರಿಗೆ ಸಿಗುವ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು  ಈಡೇರಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಪುರಸಭೆಯಲ್ಲಿ ಕೆಲಸ ನಿರ್ವಹಿಸುವ ನೌಕರರು ತೋಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಪೌರನೌಕರ ಸಂಘದ ಅಧ್ಯಕ್ಷ ಸಂತೋಷ್ ಚಲವಾದಿ ಮಾತನಾಡಿ,‘ನೀರು ಸರಬರಾಜು ಸಹಾಯಕರು ಸೇರಿದಂತೆ ವಿವಿಧ ವೃಂದದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಕುಡಿಯುವ ನೀರಿನ ಗುಣಮಟ್ಟ ನಿರ್ವಹಣೆಯ ಮತ್ತು ಪ್ಲಂಬರ್ ಹುದ್ದೆಗಳ ಭರ್ತಿ ಮಾಡಬೇಕು. ಘನತ್ಯಾಜ್ಯ ಮತ್ತು ವಸ್ತು ನಿರ್ವಹಣೆಯ ವಾಹನಗಳಿಗೆ ಚಾಲಕರನ್ನು ಮತ್ತು ಮಾಲಿನ್ಯ ನೀರು ನಿರ್ವಹಣೆಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

‘ನೇರ ಪಾವತಿಯಲ್ಲಿರುವ ಪೌರಕಾರ್ಮಿಕರು ಲೋಡರ್ಸ್ ಮತ್ತು ಕ್ಲೀನರ್ಸ್‌ಗಳು ಕೆಲಸ ಮಾಡುವಾಗ ಮರಣ ಹೊಂದಿದರೆ ಅವರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಮೊತ್ತವನ್ನು ನೀಡಬೇಕು. ಅನುಕಂಪ ಆಧಾರದ ಮೇಲೆ ಅವರು ಕುಟುಂಬದ ಸದಸ್ಯರಿಗೆ ಕೆಲಸ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ನೇಮಕಾತಿ ವಿಚಾರದಲ್ಲಿ ಸರ್ಕಾರ ಮೌನವಹಿಸುವ ಮೂಲಕ ಪೌರಕಾರ್ಮಿಕರನ್ನು ಕಡೆಗಣಿಸಿದೆ. ಹಲವು ಬಾರಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಈಗ ನೀಡುತ್ತಿರುವ ವೇತನ, ಸೌಲಭ್ಯ ಸಾಕಾಗುತ್ತಿಲ್ಲ. ನೇರ ಪಾವತಿ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.