ADVERTISEMENT

ಚುನಾವಣಾ ಖರ್ಚು–ವೆಚ್ಚ ಪ್ರಾಮಾಣಿಕವಾಗಿ ಪರಿಶೀಲಿಸಿ: ಫೌಜಿಯಾ ತರನ್ನುಮ್

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 14:08 IST
Last Updated 31 ಜನವರಿ 2024, 14:08 IST
ಫೌಜಿಯಾ ತರನ್ನುಮ್
ಫೌಜಿಯಾ ತರನ್ನುಮ್   

ಕಲಬುರಗಿ: ‘ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಆಯೋಗ ನಿಗದಿಪಡಿಸಿದ ಮಿತಿಯಲ್ಲಿಯೇ ಚುನಾವಣಾ ಖರ್ಚು–ವೆಚ್ಚ ಮಾಡುತ್ತಾರೋ ಇಲ್ಲವೋ ಎನ್ನುವುದನ್ನು ಪ್ರಾಮಾಣಿಕವಾಗಿ ಪರಿಶೀಲಿಸಬೇಕು’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು. 

ನಗರದ ಡಾ. ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ವಿವಿಧ ಚುನಾವಣಾ ತಂಡಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.  

ಅಭ್ಯರ್ಥಿಗಳು ಚುನಾವಣೆ ಸಂಬಂಧ ಮಾಡುವ ಪ್ರತಿ ವೆಚ್ಚವನ್ನೂ ನಿಯಮದ ಪ್ರಕಾರ ಸಮರ್ಪಕವಾಗಿ ಪರಿಶೀಲಿಸಿದ ಮೇಲೆ ಅಧಿಕಾರಿಗಳು ವರದಿ ನೀಡಬೇಕು. ಈಗಾಗಲೇ ಮಾದರಿ ನೀತಿ ಸಂಹಿತೆ ತಂಡಗಳನ್ನು ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ADVERTISEMENT

ಒಂದೂವರೆ ತಿಂಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಬಹುದು. ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಲೋಪ ಆಗದಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಎಲ್ಲಾ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಸಮಪರ್ಕವಾಗಿ ನಿಭಾಯಿಸಬೇಕು’ ಎಂದು ಹೇಳಿದರು.

ಮಾಸ್ಟರ್ ಟ್ರೈನರ್ ಶಶಿಧರ ರೆಡ್ಡಿ ಮಾತನಾಡಿ ಚುನಾವಣೆಗೆ ಸಂಬಂಧಪಟ್ಟ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀನಿಧಿ ಎನ್., ಪಾಲಿಕೆ ಆಯುಕ್ತ ಭುವನೇಶ್‌ ದೇವಿದಾಸ ಪಾಟೀಲ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿದರು.

ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ಆಫ್ರೀನ್, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆ ತಹಶೀಲ್ದಾರ್ ಪಂಪಯ್ಯ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.