ADVERTISEMENT

ಕಲ್ಯಾಣ ಕರ್ನಾಟಕ ಖಾಲಿ ಹುದ್ದೆಗಳ ಭರ್ತಿಗೆ ಪ್ರಿಯಾಂಕ್‌ ಖರ್ಗೆ ಪತ್ರ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 16:12 IST
Last Updated 21 ಅಕ್ಟೋಬರ್ 2023, 16:12 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬ ಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಎಲ್ಲಾ ಸಚಿವರಿಗೆ ಹಾಗೂ ಸಚಿವಾಲಯ ಮುಖ್ಯಸ್ಥರಿಗೆ ಸಂವಿಧಾನದ 371(ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆದ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ.

ಕಳೆದ ಆಗಸ್ಟ್ 17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕಿರುವುದರಿಂದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ ಪತ್ರಗಳನ್ನು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ರವಾನಿಸಿದ್ದಾರೆ. 371 (ಜೆ) ಕಲಂ ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜೊತೆ ನೀಡಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಇವುಗಳಲ್ಲಿ ಎ, ಬಿ, ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ.

ADVERTISEMENT

ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಸಚಿವ ಪ್ರಿಯಾಂಕ್‌ ಸಂಪುಟದ ಎಲ್ಲಾ ಸಚಿವರಿಗೂ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.