ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ
ಕಲಬುರಗಿ: ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೆಲಿಕಾಪ್ಟರ್ ಮೂಲಕ ಸಂಚರಿಸಿ ವಿವಿಧ ಭಾಗಗಳಲ್ಲಿ ಪರಿಸ್ಥಿತಿ ಅವಲೋಕನ ನಡೆಸಿದರು.
ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.
ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ. ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.