ADVERTISEMENT

‘ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿ’; ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 13:38 IST
Last Updated 7 ಜೂನ್ 2025, 13:38 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ 
ಬಸವಜಯ ಮೃತ್ಯುಂಜಯ ಸ್ವಾಮೀಜಿ    

ಕಲಬುರಗಿ: ‘ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ದೀಕ್ಷ ಪಂಚಮಸಾಲಿ, ಮಲೇಗೌಡ, ಗೌಡಲಿಂಗಾಯತ ಸಮುದಾಯದವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ, ಲಾಠಿ ಚಾರ್ಜ್‌ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ಸಮಿತಿ ರಚಿಸಬೇಕು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2024ರ ಡಿಸೆಂಬರ್‌ 10ರಂದು ಮೀಸಲಾತಿ ಹೋರಾಟದ ವೇಳೆ ಹೋರಾಟ ನಿರತ ಸಮುದಾಯದವರ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್‌ ಧಾರವಾಡ ಪೀಠ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಆದೇಶ ನೀಡಿ ಎರಡು ತಿಂಗಳು ಕಳೆದರೂ ಸರ್ಕಾರ ಇದುವರೆಗೂ ಕ್ರಮ ತೆಗೆದುಕೊಂಡಿಲ್ಲ. ಈ ಕುರಿತು ಶೀಘ್ರ ಸಮಿತಿ ರಚಿಸಿ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದರು.

‘ಪಂಚಮಸಾಲಿ 2ಎ ಮೀಸಲಾತಿಗಾಗಿ ಮುಂದಿನ ಹೋರಾಟವನ್ನು ಬಸವಕಲ್ಯಾಣದಿಂದ ಪ್ರಾರಂಭಿಸಲಾಗುತ್ತಿದ್ದು, ಈ ಕುರಿತು ರೂಪುರೇಷೆ ಹಾಕಿಕೊಳ್ಳಲಾಗುತ್ತಿದೆ’ ಎಂದು ಅವರು ಇದೇ ವೇಳೆ ತಿಳಿಸಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ದೀಕ್ಷ ಪಂಚಮಸಾಲಿ ಜಿಲ್ಲಾಧ್ಯಕ್ಷ ಶರಣು ಪಪ್ಪಾ, ದೀಕ್ಷ ಪಂಚಮಸಾಲಿ ವಕೀಲರ ಪರಿಷತ್‌ ಜಿಲ್ಲಾಧ್ಯಕ್ಷ ರವೀಂದ್ರ ಬಬಲೇಶ್ವರ, ರಮೇಶ ಬಿರಾದಾರ, ಸಂಜೀವ ಸೂಗೂರ, ಸೋಮಶೇಖರ ಮೂಲಗೆ, ಮಲ್ಲನಗೌಡ ಪಾಟೀಲ ಇತರರು ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.