ADVERTISEMENT

ಗಡಿ ಪ್ರಾಧಿಕಾರದಿಂದ 'ಗಡಿ ಜನಪದ ಅಧ್ಯಯನ’

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 4:46 IST
Last Updated 15 ಡಿಸೆಂಬರ್ 2020, 4:46 IST
ವಿಕಾಸೌಧದಲ್ಲಿ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ಸೋಮವಾರ ನಡೆಯಿತು. ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಇದ್ದರು.
ವಿಕಾಸೌಧದಲ್ಲಿ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ಸೋಮವಾರ ನಡೆಯಿತು. ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಇದ್ದರು.   

ಬೆಂಗಳೂರು: ‘ಗಡಿ ಜನಪದ’ ಅಧ್ಯಯನ ನಡೆಸಿ, ರಾಜ್ಯದ ಗಡಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ, ಕಾರ್ಯಗತಗೊಳಿಸಲು ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ನಿರ್ಧರಿಸಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ನಡೆದ ಪ್ರಾಧಿಕಾರದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ’ ಅನ್ವಯ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಚಟುವಟಿಕೆಯ ಕುರಿತು ವಿಚಾರ ವಿನಿಮಯ ನಡೆಸಿದರು.

ಸಭೆಯಲ್ಲಿ ಹಂಪಿ ವಿಶ್ವವಿದ್ಯಾಲಯದ ಮೂಲಕ ಗಡಿ ಭಾಗದ ಸಮಗ್ರ ಅಧ್ಯಯನ ನಡೆಸಲು ಮತ್ತು ಗಡಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದ ಸ್ಥಿತಿಗತಿಗಳ ಅರಿತು ಹಾಗೂ ಮೂಲಸೌಲಭ್ಯ ಅಭಿವೃದ್ಧಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ADVERTISEMENT

ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಮತ್ತು ಕೇರಳಕ್ಕೆ ಹೊಂದಿರುವ ಕಾಸರಗೋಡು ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಆ ಮೂಲಕ, ಗಡಿಭಾಗದಲ್ಲಿ ಕನ್ನಡ ಭಾಷೆ, ಸಂಸ್ಕೃತಿಯ ಬೆಳವಣಿಗೆಗೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೂಡಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆಯ ಬಳಿಕ ಮಾತನಾಡಿದ ಸೋಮಶೇಖರ, ‘ಪ್ರಾಧಿಕಾರದ ಮೊದಲ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಗಡಿ ಭಾಗದ ಅಭಿವೃದ್ಧಿ ಉದ್ದೇಶದಿಂದ ಈವರೆಗೆ ಕೈಗೊಂಡ ಕ್ರಮಗಳು ಮತ್ತು ಮುಂದೆ ತುರ್ತು ಆಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿಗೆ ವರದಿ ಸಲ್ಲಿಸಲಾಗುವುದು. ಈಗಾಗಲೇ ರಾಜ್ಯದ ಗಡಿ ಭಾಗದಲ್ಲಿರುವ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡುವಂತೆ ತಿಳಿಸಲಾಗಿದೆ’ ಎಂದರು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ..ಎಸ್‌. ನಾಗಾಭರಣ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಸಂತಕುಮಾರ್, ಗಡಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಎಂ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.