ADVERTISEMENT

26ರಂದು ಅಖಿಲ ಭಾರತ ಮುಷ್ಕರ; 250 ಸಂಘಟನೆಗಳ ಬೆಂಬಲ

ರೈತ ಸಂಘರ್ಷ ಸಮನ್ವಯ ಸಮಿತಿ ಮುಖಂಡರಿಂದ ಪತ್ರಿಕಾಗೋಷ್ಠಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 3:14 IST
Last Updated 25 ನವೆಂಬರ್ 2020, 3:14 IST

ಕಲಬುರ್ಗಿ: ಕೇಂದ್ರದ ಭೂಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ಇದೇ 26ರಂದು ನಡೆಯಲಿರುವ ಅಖಿಲ ಭಾರತ ಮಟ್ಟದ ಮುಷ್ಕರಕ್ಕೆ ಕೇಂದ್ರೀಯ ಮಟ್ಟದ 250ಕ್ಕೂ ಅಧಿಕ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಜಿಲ್ಲೆಯಲ್ಲಿಯೂ ಅಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘರ್ಷ ಸಮನ್ವಯ ಸಮಿತಿ ಹಾಗೂ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮೌಲಾ ಮುಲ್ಲಾ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ರೈತರು, ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು ಮುಷ್ಕರವನ್ನು ಬೆಂಬಲಿಸಲಿದ್ದಾರೆ. ಇತ್ತೀಚೆಗೆ 44 ಕಾರ್ಮಿಕ ಕಾನೂನುಗಳನ್ನು ಒಟ್ಟುಗೂಡಿಸಿ 4 ಕಾರ್ಮಿಕ ಸಂಹಿತೆಗಳನ್ನಾಗಿ ಮಾಡುವ ಸಂದರ್ಭದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜೊತೆ ಚರ್ಚೆ ನಡೆಸಿಲ್ಲ. ಚಿಲ್ಲರೆ ಮಾರುಕಟ್ಟೆಯಲ್ಲಿ ವಿದೇಶಿ ಮತ್ತು ದೇಶೀಯ ಬಂಡವಾಳಗಾರರನ್ನು ಉತ್ತೇಜಿಸಿದ್ದಾರೆ. ಇದು ದೇಶದ ಆಹಾರ ಭದ್ರತೆಗೆ ಅಪಾಯವನ್ನು ಉಂಟು ಮಾಡಲಿದೆ ಎಂದರು.

ರಾಜ್ಯದಲ್ಲಿರುವ ಪ್ರಮುಖ ರೈತ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿವೆ. ಅದೇ ರೀತಿ ಸರ್ಕಾರ ಹಾಗೂ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿಯ ಅನುಷ್ಠಾನಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳೂ ಮಷ್ಕರವನ್ನು ಬೆಂಬಲಿಸಿವೆ ಎಂದು ಹೇಳಿದರು.

ADVERTISEMENT

ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ,ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‌ಕೆಎಸ್‌) ಮುಖಂಡ ಮಹೇಶ ಎಸ್.ಬಿ, ರೈತ ಮುಖಂಡರಾದ ನಾಗೇಂದ್ರಪ್ಪ, ಜಗದೇವಿ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.