ADVERTISEMENT

‘ಮೃತ ರೈತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಿ’

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 2:16 IST
Last Updated 25 ನವೆಂಬರ್ 2021, 2:16 IST
ನಾಗೇಂದ್ರಪ್ಪ ಥಂಬೆ
ನಾಗೇಂದ್ರಪ್ಪ ಥಂಬೆ   

ಕಲಬುರಗಿ: ಮೂರು ಕೃಷಿ ಕಾಯ್ದೆ ತಿದ್ದುಪಡಿಗಳನ್ನು ರದ್ದುಪಡಿಸಲು ಆಗ್ರಹಿಸಿ ದೆಹಲಿಯಲ್ಲಿ ನಡೆದ ಆಂದೋಲನದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ₹25 ಲಕ್ಷ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಂದ್ರಪ್ಪ ಆರ್. ಥಂಬೆ ಆಗ್ರಹಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೆ ಮುಂದಾಲೋಚನೆ ಇಲ್ಲದೆ, ಕೇವಲ ಬಂಡವಾಳಶಾಹಿಗಳ ಹಿತ ಕಾಪಾಡಲು ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಜಾರಿಗೆ ತಂದಿತು. ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ಮನವಿ ಮಾಡಿದರೂ ಸರ್ಕಾರ ಸ್ಪಂದಿಸಲಿಲ್ಲ. ಅಲ್ಲದೆ ಆಂದೋಲನ ಹತ್ತಿಕ್ಕಲು ದಮನಕಾರಿ ಕ್ರಮ ಅನುಸರಿಸಿತು. ಒಂದು ವರ್ಷದ ಸತ್ಯಾಗ್ರಹದಲ್ಲಿ 800ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಬೆಳೆ ನಷ್ಟದಿಂದಾಗಿ ಜಿಲ್ಲೆಯಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಮೃತ ರೈತರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಬೇಕು. ಅತಿವೃಷ್ಟಿ, ಪ್ರವಾಹದಿಂದ ಬೆಳೆ ಹಾನಿ ಅನುಭವಿಸಿದ ಹಾಗೂ ಜಾನುವಾರು ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ನೀಡಬೇಕು. ತೊಗರಿ ಖರೀದಿ ಕೇಂದ್ರ ಆರಂಭಿಸಿ ₹8 ಸಾವಿರ ಬೆಂಬಲ ಬೆಲೆ ನೀಡಿ ಖರೀದಿ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುವುದನ್ನು ನಿಲ್ಲಿಸಬೇಕು. ಸದನದಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು.

ರೈತ ಮುಖಂಡರಾದ ದಸ್ತಗೀರ ದೇವಣಗಾಂವ, ನಾಗರಾಜ ಕನಸುರ, ಸಿದ್ದಲಿಂಗ ಸ್ವಾಮಿ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.