ADVERTISEMENT

ಅತಿಥಿ ಉಪನ್ಯಾಸಕ ಸೇವಾ ಭದ್ರತೆ: ಶಾಶ್ವತ ನಿಯಮಾವಳಿ ರಚಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2018, 9:10 IST
Last Updated 12 ಡಿಸೆಂಬರ್ 2018, 9:10 IST

ಕಲಬುರ್ಗಿ: ‘ಅತಿಥಿ ಉಪನ್ಯಾಸಕ ಸೇವಾ ಭದ್ರತೆಗೆ ಸಂಬಂಧಿಸಿದಂತೆ ಬೆಳಗಾವಿ ಅಧಿವೇಶನದಲ್ಲಿ ಶಾಶ್ವತ ನಿಯಮಾವಳಿ ರಚಿಸಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಜಗಪ್ಪ ತಳವಾರ ಒತ್ತಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಕನಿಷ್ಠ ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ನಿರಂತರ ಹೋರಾಟದ ಫಲವಾಗಿ ಡಿ.4ರಂದು ನಡೆದ ಉನ್ನತ ಶಿಕ್ಷಣ ಸಮಿತಿ ಸಭೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ₹25 ಸಾವಿರ ವೇತನ ನೀಡಲು ನಿರ್ಧರಿಸಲಾಗಿದೆ. ಅದೇ ರೀತಿ ಈ ಅಧಿವೇಶನದಲ್ಲಿ ವಿಶೇಷ ನಿಯಮಾವಳಿಯನ್ನು ರೂಪಿಸಬೇಕು’ ಎಂದು ಆಗ್ರಹಿಸಿದರು.

‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ಈ ಬಗ್ಗೆ ವಿಳಂಬ ಮಾಡದೆ ನಿರ್ಣಯ ಕೈಗೊಳ್ಳಬೇಕು. ಇಲ್ಲವಾದಲ್ಲಿ ಡಿ.14ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನ ಸಾಂಕೇತಿಕ ಧರಣಿ ನಡೆಸಲಾಗುವುದು. ಮೂರು ದಿನಗಳಲ್ಲಿ ನಿರ್ಣಯ ಕೈಗೊಳ್ಳದಿದ್ದರೆ ಡಿ. 17ರಂದು ರಾಜ್ಯ ಸಮಿತಿಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಸಂಘಟನಾ ಕಾರ್ಯದರ್ಶಿ ರಮೇಶ ಕವಡೆ, ಪ್ರಧಾನ ಕಾರ್ಯದರ್ಶಿ ಅಣವೀರಪ್ಪ ಬೋಳೆವಾಡ, ಖಜಾಂಚಿ ಡಾ. ವೀರೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.