
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಂಗಳವಾರ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಜ್ಞಾನಗಂಗಾ ಆವರಣದಲ್ಲಿರುವ ಡಾ.ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಘಟಿಕೋತ್ಸವದಲ್ಲಿ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿನ ಸಾಧನೆಗೆ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಸಾಮಾಜಿಕ ಸೇವೆ ಪರಿಗಣಿಸಿ ಮಾಜಿ ಸಚಿವ ಮುರುಗೇಶ ನಿರಾಣಿ ಹಾಗೂ ಸಾಮಾಜಿಕ ಸೇವೆ ಗುರುತಿಸಿ ಹೋರಾಟಗಾರ ಕೇದಾರಲಿಂಗಯ್ಯ ಹಿರೇಮಠ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಗೌರವ ಪದವಿಗಳನ್ನು ಪ್ರದಾನ ಮಾಡಿದರು.
ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯಗಳ ಸಮಕುಲಾಧಿಪತಿ ಡಾ. ಎಂ.ಸಿ. ಸುಧಾಕರ ಹಾಗೂ ಪುಣೆಯ ಉನ್ನತ ರಕ್ಷಣಾ ತಂತ್ರಜ್ಞಾನ ಸಂಸ್ಥೆಯ (ಡೀಮ್ಡ್ ವಿಶ್ವವಿದ್ಯಾಲಯ) ವಿಶ್ರಾಂತ ಕುಲಪತಿ ಪ್ರೊ. ಎಲ್.ಎಂ. ಪಟ್ನಾಯಕ್ ಅವರಿಗೆ ಸಾಥ್ ನೀಡಿದರು. ಸಾವಿರಾರು ಮಂದಿ ಈ ಕ್ಷಣಗಳಿಗೆ ಸಾಕ್ಷಿಯಾದರು.
ಬಳಿಕ ಅತ್ಯುತ್ತಮ ಸಾಧನೆ ತೋರಿದ 77 ವಿದ್ಯಾರ್ಥಿಗಳು 172 ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಚಿನ್ನದ ಪದಕ ವಿಜೇತರಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆಯ ವಿದ್ಯಾರ್ಥಿನಿ ಚನ್ನಮ್ಮ ಇವರು ಅತಿ ಹೆಚ್ಚು 11 ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದು 'ಚಿನ್ನದ ಹುಡುಗಿ' ಎನಿಸಿದರು.
ಪ್ರಾಣಿಶಾಸ್ತ್ರ ವಿಭಾಗದ ರಾಹುಲ್ ಇವರು 9, ಎಂಬಿಎ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ಸುರೇಖಾ 8, ರಾಜ್ಯಶಾಸ್ತ್ರ ವಿಷಯದಲ್ಲಿ ಸೇಡಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶಮೀಮ್ ರಫತ್ 6, ಸಮಾಜ ಕಾರ್ಯ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ದೀಪಾ 6, ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸುಬೀಯಾ ನೂರೈನ್ 5, ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಿಯಾಂಕಾ ರಾಠೋಡ್ 5, ಜೀವ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ಶಶಿಕುಮಾರ್ 5 ಹಾಗೂ ಕಲಬುರಗಿ ನಗರದ ಗುರುಕುಲ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಜಿ. ಖೇಮ್ಕರ್ ಅವರು ಬಿಕಾಂ ಕೋರ್ಸಿನಲ್ಲಿ 5 ಚಿನ್ನದ ಪದಕ ಪಡೆದರು.
123 ಅಭ್ಯರ್ಥಿಗಳಿಗೆ ಪಿ.ಎಚ್.ಡಿ. ಪದವಿ
43ನೇ ಘಟಿಕೋತ್ಸವದಲ್ಲಿ ವಿವಿಧ ನಿಕಾಯಗಳಲ್ಲಿ ಒಟ್ಟು 123 ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ನಡೆಯಲಿದೆ. ಕಲಾ ನಿಕಾಯದಲ್ಲಿ 30, ಸಮಾಜ ವಿಜ್ಞಾನ ನಿಕಾಯದಲ್ಲಿ 26, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದಲ್ಲಿ 47, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದಲ್ಲಿ 9, ಶಿಕ್ಷಣ ನಿಕಾಯದಲ್ಲಿ 7 ಹಾಗೂ ಕಾನೂನು ನಿಕಾಯದಲ್ಲಿ 4 ವಿದ್ಯಾರ್ಥಿಗಳಿದ್ದಾರೆ. ಒಟ್ಟಾರೆಯಾಗಿ 62 ಪುರುಷ ಹಾಗೂ 61 ಮಹಿಳಾ ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.