ADVERTISEMENT

ವಿಧಾನಪರಿಷತ್‌: ಹಟಗಾರ ಸಮಾಜಕ್ಕೆ ಪ್ರಾತಿನಿಧ್ಯ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 12:44 IST
Last Updated 10 ಜೂನ್ 2020, 12:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರ್ಗಿ: ರಾಜ್ಯದಲ್ಲಿ 27 ಲಕ್ಷ ಜನಸಂಖ್ಯೆ ಹೊಂದಿರುವ ಹಟಗಾರ ಸಮಾಜಕ್ಕೆ ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಕರ್ನಾಟಕ ರಾಜ್ಯ ಹಟಗಾರ ಸಮಾಜದ ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಷ್ಟ್ರೀಯ ಲಿಂಗಾಯತ ಹಟಗಾರ ಕೋಷ್ಠಿ ಸಮಾಜದ ಉಪಾಧ್ಯಕ್ಷ ಆರ್.ಸಿ.ಘಾಳೆ ಬಿಜೆಪಿ ಮುಖಂಡರನ್ನು ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಲ್ಲಿಯವರೆಗೂ ನಮ್ಮ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ನಮ್ಮ ಸಮಾಜದವರೇ ಆದ ಎಂ.ಡಿ.ಲಕ್ಷ್ಮಿನಾರಾಯಣ ಅವರು ಕೈಮಗ್ಗ ನಿಗಮದ ಅಧ್ಯಕ್ಷರಾದ ಸಂದರ್ಭದಲ್ಲಿ ಕೆಲ ಸುಧಾರಣೆಗಳಾದವು. ಆ ನಂತರ ಪ್ರಾತಿನಿಧ್ಯ ಸಿಕ್ಕಿಲ್ಲ. ದಿ.ಚಂದ್ರಶೇಖರ ಪಾಟೀಲ ರೇವೂರ ಅವರಿಗೆ ಆಪ್ತರಾದ, ಹಲವು ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿರುವ ಸಮಾಜದ ಮುಖಂಡ, ಯುವ ವಕೀಲ ವಿನೋದಕುಮಾರ ಜೆನೇವರಿ ಅವರನ್ನು ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡಬೇಕು. ಆ ಮೂಲಕ ಹಟಗಾರ ಸಮಾಜದವರು ನಂಬಿಕೊಂಡಿರುವ ನೇಕಾರ ವೃತ್ತಿಯ ಸಮಸ್ಯೆಗಳನ್ನು ಪರಿಹರಿಸಲು ಅನುವು ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.

‘ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ನಾಯಕರಿಗೆ ಮನವಿಯನ್ನು ಕಳಿಸಿಲಾಗಿದೆ. ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಟಗಾರ ಸಮಾಜದವರು ಇದ್ದು, ವಿಧಾನಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಮಾಡಿಕೊಡಬೇಕು’ ಎಂದು ಘಾಳೆ ಮನವಿ ಮಾಡಿದರು.

ADVERTISEMENT

ಮುಖಂಡರಾದ ಅಣ್ಣಾರಾಯ ಕನಕೇರಿ, ಚಂದ್ರಶೇಖರ ಮ್ಯಾಲಗಿ, ಶಿವಲಿಂಗಪ್ಪ ಅಷ್ಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.