ADVERTISEMENT

ವೇತನಕ್ಕೆ ಒತ್ತಾಯಿಸಿ ವಸತಿ ನಿಲಯ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 16:23 IST
Last Updated 15 ಡಿಸೆಂಬರ್ 2020, 16:23 IST
ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸಿದ ಕಾರ್ಮಿಕರ ಲಾಕ್‍ಡೌನ್ ಅವಧಿಯ ವೇತನ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ಕೆಲಸ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಹೊರಗುತ್ತಿಗೆ ಹಾಸ್ಟೆಲ್ ಕಾರ್ಮಿಕರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕರು ಅಡುಗೆ, ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರಾಗಿ ಕಾರ್ಯ ನಿರ್ವಹಿಸಿದ ನೌಕರರ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಲಾಕ್‍ಡೌನ್ ಅವಧಿಯ ವೇತನವನ್ನು ಎಲ್ಲ ವಸತಿ ನಿಲಯಗಳ ಹೊರಗುತ್ತಿಗೆ ಕಾರ್ಮಿಕರಿಗೆ ನೀಡಬೇಕು. ಜೂನ್ ತಿಂಗಳಿನಿಂದ ವೇತನ ಬಿಡುಗಡೆ ಮಾಡಬೇಕು. ಚಿತ್ತಾಪುರ ಮತ್ತು ಸೇಡಂ ತಾಲ್ಲೂಕಿನ ಕ್ವಾರಂಟೈನ್ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ವೇತನ ಇನ್ನೂ ಪಾವತಿಸಿಲ್ಲ. ಇದನ್ನೂ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ADVERTISEMENT

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಎಂ.ಜಿ, ಮುಖಂಡರಾದ ಶರಣು ಹೇರೂರ, ಬಸವರಾಜ ಹುಳಿಗೋಳ, ವಿ.ಜಿ.ದೇಸಾಯಿ, ಎಸ್.ಎಂ.ಶರ್ಮಾ, ಸಂತೋಷ ದೊಡ್ಮನಿ, ಶರಣಮ್ಮ, ಅಂಬುಜಾ, ಶಾರದಾ ಶ್ರೀಧರ, ಮಲ್ಲಯ್ಯ ರಂಜೋಳ, ದೇವಕಿ ಸೇಡಂ, ಚಂದ್ರಪ್ಪ ಸೇಡಂ, ವಿಜಯಲಕ್ಷ್ಮಿ ಮಳಖೇಡ, ಪವನಕುಮಾರ ಕೊಡ್ಲಾ, ರಮೇಶ ಕುಂಬಾರ, ಅಶೋಕ ಅಂಬಲಗಾ, ಚಿತ್ರಶೇಖರ ಕುರಗುಂಟಾ, ಸದಾ, ಮಾರುತಿ, ಇರಗಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.