ADVERTISEMENT

‘113 ಕಿ.ಮೀ. ಮಾನವ ಸರಪಳಿ’

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 16:23 IST
Last Updated 2 ಸೆಪ್ಟೆಂಬರ್ 2024, 16:23 IST

ಕಲಬುರಗಿ: ‘ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 15ರಂದು ಬೀದರ್‌ನಿಂದ ಚಾಮರಾಜನಗರವರೆಗೆ ರಾಜ್ಯದಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ‘ಜಿಲ್ಲೆಯಾದ್ಯಂತ 113 ಕಿ.ಮೀ. ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಪ್ರತಿ 1 ಕಿ.ಮೀ. ಅಂತರದಲ್ಲಿ ಸುಮಾರು 800 ಜನರನ್ನು ನಿಲ್ಲಿಸಬೇಕು. ಅಂದು ಬೆಳಿಗ್ಗೆ 8.45ರ ಒಳಗೆ ಎಲ್ಲವೂ ಸಜ್ಜುಗೊಂಡು ಬೆಳಿಗ್ಗೆ 9ಕ್ಕೆ ಮಾನವ ಸರಪಳಿ ನಿರ್ಮಿಸಿ, ಪ್ರಜಾಪ್ರಭುತ್ವದ ಮಹತ್ವ ಸಾರಬೇಕಿದೆ’ ಎಂದರು.

‘ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್‌ದಿಂದ ಯಾದಗಿರಿ ಗಡಿಗೆ ಹೊಂದಿಕೊಂಡ ಅಲ್ಲಿಪುರ ತಾಂಡಾವರೆಗೆ ನಿಲ್ಲುವ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸಾರ್ವಜನಿಕರಿಗೆ ಕುಡಿಯುವ ನೀರು, ವಾಹನದ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

‘ಕಿಣ್ಣಿ ಸಡಕ್‌ನಿಂದ ಕಮಲಾಪೂರ-ಕಲಬುರಗಿ-ಶಹಾಬಾದ್-ವಾಡಿ-ನಾಲವಾರ ಮಾರ್ಗವಾಗಿ ಅಲ್ಲಿಪುರ ತಾಂಡಾವರೆಗೆ 113 ಕಿ.ಮೀ. ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಆಯಾ ತಾಲ್ಲೂಕುಗಳ ತಹಶೀಲ್ದಾರರು, ಇಒ, ಪಿಡಿಒಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಕಾರ್ಯಕ್ರಮ ಯಶಸ್ಸಿಗೆ ಮುತುವರ್ಜಿ ವಹಿಸಬೇಕು. ಪೊಲೀಸರು ವಾಹನಗಳ ಸಂಚಾರಕ್ಕೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.