ADVERTISEMENT

‘ಖರ್ಗೆ ಗೆಲ್ಲಿಸಲು ಜೆಡಿಎಸ್‌ ಶ್ರಮ’

ಜೆಡಿಎಸ್‌ ಕಚೇರಿಗೆ ಕಾಂಗ್ರೆಸ್‌ ನಾಯಕರ ಭೇಟಿ; ಜಂಟಿ ಸಭೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2019, 14:58 IST
Last Updated 8 ಮಾರ್ಚ್ 2019, 14:58 IST
ಕಲಬುರ್ಗಿ ಜೆಡಿಎಸ್‌ ಕಚೇರಿಯಲ್ಲಿ ನಡೆದ ಜೆಡಿಎಸ್‌–ಕಾಂಗ್ರೆಸ್‌ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಮಾತನಾಡಿದರು
ಕಲಬುರ್ಗಿ ಜೆಡಿಎಸ್‌ ಕಚೇರಿಯಲ್ಲಿ ನಡೆದ ಜೆಡಿಎಸ್‌–ಕಾಂಗ್ರೆಸ್‌ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಮಾತನಾಡಿದರು   

ಕಲಬುರ್ಗಿ:‘ಲೋಕಸಭೆ ಚುನಾವಣೆಯಲ್ಲಿ ಕಲಬುರ್ಗಿ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲಾಗಿದ್ದು, ಕಾಂಗ್ರೆಸ್‌ ಪರ ಕೆಲಸ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ವಿಶ್ವನಾಥ ಸೂಚಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೆಲ್ಲಿಸಲು ನಾವೆಲ್ಲ ಶ್ರಮಿಸುತ್ತೇವೆ’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ತಡಕಲ್‌ ಹೇಳಿದರು.

ಇಲ್ಲಿಯ ಜೆಡಿಎಸ್‌ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಕಾಂಗ್ರೆಸ್‌–ಜೆಡಿಎಸ್‌ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರಚಾರದಲ್ಲಿ ನಾವೆಲ್ಲ ಸಕ್ರಿಯವಾಗಿ ಪಾಲ್ಗೊಳ್ಳುತ್ತೇವೆ. ದಾಖಲೆ ಮತಗಳ ಅಂತರದಿಂದ ಖರ್ಗೆ ಅವರನ್ನು ಗೆಲ್ಲಿಸುತ್ತೇವೆ’ ಎಂದರು.

ADVERTISEMENT

ಕಾಂಗ್ರೆಸ್ ಪಕ್ಷದ ಜಿಲ್ಲಾ ಉಸ್ತುವಾರಿ, ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು 371 (ಜೆ) ಕಲಂ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೈದರಾಬಾದ್‌ ಕರ್ನಾಟಕದ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಅವನ್ನು ಗೆಲ್ಲಿಸಲು ಎರಡೂ ಪಕ್ಷಗಳವರು ಶ್ರಮಿಸಬೇಕು ಎಂದರು.

ಕಾಂಗ್ರೆಸ್‌ ಮುಖಂಡ ಡಾ. ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್‌ ಸದಸ್ಯರಾದ ಯು.ಬಿ. ವೆಂಕಟೇಶ್, ಶರಣಪ್ಪ ಮಟ್ಟೂರ ಮಾತನಾಡಿ ಜೆಡಿಎಸ್‌ನವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಜೆಡಿಎಸ್‌ ಮುಖಂಡ ಎಂ.ಬಿ. ಅಂಬಲಗಿ ಮಾತನಾಡಿದರು. ಜಿಲ್ಲಾ ಜೆಡಿಎಸ್ ಘಟಕದ ಮಹಾಪ್ರಧಾನ ಕಾರ್ಯದರ್ಶಿ ದೇವೇಗೌಡ ತೆಲ್ಲೂರ ಸ್ವಾಗತಿಸಿದರು. ವಕ್ತಾರ ಮನೋಹರ ಪೊದ್ದಾರ ನಿರೂಪಿಸಿದರು. ಗುರುನಾಥ ಪೂಜಾರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.