ADVERTISEMENT

ಕಲಬುರಗಿ: ಜೇವರ್ಗಿ–ಬಳ್ಳಾರಿ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 4:29 IST
Last Updated 17 ಫೆಬ್ರುವರಿ 2026, 4:29 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಲಬುರಗಿ: ಬೀದರ್, ಕಲಬುರಗಿ ಜಿಲ್ಲೆಗಳಿಂದ ಜೇವರ್ಗಿ ಮೂಲಕ ಬಳ್ಳಾರಿ, ಹೊಸಪೇಟೆ ಮೂಲಕ ಮಧ್ಯ ಕರ್ನಾಟಕ ಹಾಗೂ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಜೇವರ್ಗಿ–ಚಾಮರಾಜನಗರ 150ಎ ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜಗೇರಿಸಲು ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಅವರು ತೀರ್ಮಾನಿಸಿದ್ದಾರೆ.

ರಾಜ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳನ್ನು ಚತುಷ್ಪಥ, ಷಟ್ಪಥ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಇತ್ತೀಚೆಗೆ ಬೆಂಗಳೂರಿನಲ್ಲಿ ಗಡ್ಕರಿ ಅವರೊಂದಿಗೆ ನಡೆದ ಸಭೆಯಲ್ಲಿ ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮನವಿ ಸಲ್ಲಿಸಿದ್ದರು.

ADVERTISEMENT

ಬಿಜೆಪಿಯಿಂದ ಆಯ್ಕೆಯಾದ ಸಂಸದರು, ಲೋಕಸಭಾ ಸದಸ್ಯರು ಸಹ ರಾಜ್ಯದ ಹಲವು ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ಸಚಿವ ಗಡ್ಕರಿ ಅವರು ರಾಜ್ಯದ ಆರು ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ, ರಾಜ್ಯ ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಹಿಸಿಕೊಂಡು ರಸ್ತೆಗಳನ್ನು ವಿಸ್ತರಣೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಅದರಂತೆ ಜೇವರ್ಗಿ–ಬಳ್ಳಾರಿ ಮಧ್ಯದ 265 ಕಿ.ಮೀ. ಉದ್ದದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತನ್ನ ಅಧೀನಕ್ಕೆ ತೆಗೆದುಕೊಂಡು ಅಭಿವೃದ್ಧಿ ಕೆಲಸ ಶುರು ಮಾಡುವಂತೆ ಸೂಚನೆ ನೀಡಿದ್ದಾರೆ. 

ಜೇವರ್ಗಿ, ಶಹಾಪುರ, ಸುರಪುರದಿಂದ ಲಿಂಗಸುಗೂರುವರೆಗಿನ ರಸ್ತೆಯು ಹೆಸರಿಗಷ್ಟೇ ರಾಷ್ಟ್ರೀಯ ಹೆದ್ದಾರಿಯಾಗಿತ್ತು. ರಸ್ತೆಗಳ ತುಂಬೆಲ್ಲ ತಗ್ಗುಗಳು, ಕಿರಿದಾದ ರಸ್ತೆ ಇದೆ. ಈ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಅಗತ್ಯದ ಕುರಿತು ‘ಪ್ರಜಾವಾಣಿ’ ವಿಶೇಷ ವರದಿಗಳನ್ನು ಪ್ರಕಟಿಸಿತ್ತು.

ಜೇವರ್ಗಿ, ಶಹಾಪುರ, ಹೊಸಪೇಟೆ ಮಾರ್ಗದ ಮೂಲಕ ಬೆಂಗಳೂರಿಗೆ ಹೊರಡುವ ಬಸ್‌ಗಳು ಕೆಟ್ಟ ರಸ್ತೆಯಿಂದಾಗಿ ನಿಗದಿತ ಅವಧಿಗಿಂತ ತಡವಾಗಿ ತಲುಪುತ್ತಿವೆ. ಅದಕ್ಕಾಗಿಯೇ ತುರ್ತು ಕೆಲಸ ಇದ್ದವರು ರಾಯಚೂರು, ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.