ADVERTISEMENT

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ- ಜಿಲ್ಲಾ ಕಾರ್ಮಿಕ ಆಯುಕ್ತ

ಬಾಲ ಕಾರ್ಮಿಕ, ಕಿಶೋರ ಕಾರ್ಮಿಕ ಕಾಯ್ದೆಯ ಮಾಹಿತಿ, ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 13:56 IST
Last Updated 22 ಜನವರಿ 2022, 13:56 IST
ಕಲಬುರಗಿಯ ಶೇಠ ಶಂಕರಲಾಲ ಲಾಹೋಟಿ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಮಾಹಿತಿ, ತರಬೇತಿ ಕಾರ್ಯಾಗಾರವನ್ನು ಗಣ್ಯರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು
ಕಲಬುರಗಿಯ ಶೇಠ ಶಂಕರಲಾಲ ಲಾಹೋಟಿ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಮಾಹಿತಿ, ತರಬೇತಿ ಕಾರ್ಯಾಗಾರವನ್ನು ಗಣ್ಯರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು   

ಕಲಬುರಗಿ: ‘ಬಾಲಕಾರ್ಮಿಕ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರ ಪಾತ್ರವೂ ಮುಖ್ಯವಾಗಿರುತ್ತದೆ’ ಎಂದು ಜಿಲ್ಲಾ ಕಾರ್ಮಿಕ ಆಯುಕ್ತ ಡಿ.ಜೆ.ನಾಗೇಶ ಹೇಳಿದರು.

ನಗರದ ಶೇಠ ಶಂಕರಲಾಲ ಲಾಹೋಟಿ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಮಾಹಿತಿ, ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

‘ಕೌಟುಂಬಿಕ ಹಾಗೂ ಆರ್ಥಿಕ ಸಮಸ್ಯೆಗೆ ಸಿಲುಕಿದವರು, ಬಾಲ್ಯ ವಿವಾಹಕ್ಕೆ ಒಳಗಾದ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸುವುದು ದೊಡ್ಡ ಜವಾಬ್ದಾರಿಯಾಗಿದೆ. ಇದಕ್ಕೆ ಜನರ ಸಹಕಾರ ತುಂಬಾ ಅವಶ್ಯ’ ಎಂದರು.

ADVERTISEMENT

‘ಸಾರ್ವಜನಿಕರು ಹಾಗೂ ಸಂಘ– ಸಂಸ್ಥೆಗಳ ಪ್ರಮುಖರು ಇಲಾಖೆಯ ಚೈಲ್ಡ್‌ ಲೈನ್‌–1098 ಸಹಾಯವಾಣಿಗೆ ಕರೆ ಮಾಡುವ ಮೂಲಕ ಬಾಲಕಾರ್ಮಿಕ ಹಾಗೂ ಶೋಷಣೆಗೆ ಒಳಗಾದ ಮಕ್ಕಳ ರಕ್ಷಣೆಗೆ ಕೈಜೋಡಿಸಬೇಕು. ಆಗ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಮಾಜದಿಂದ ತೊಡೆದುಹಾಕಲು ಸಾಧ್ಯ‘ ಎಂದರು.

ಸಹಾಯಕ ಕಾರ್ಮಿಕ ಆಯುಕ್ತಅವಿನಾಶ ನಾಯ್ಕ ಮಾತನಾಡಿ, ‘ಜಿಲ್ಲೆಯಲ್ಲಿ ಸಾಕಷ್ಟು ಬಾಲಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ಅವರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ, ಅವರಿಗೆ ಪುನರ್ವಸತಿ ಕಲ್ಪಿಸಿದ್ದೇವೆ. ಈಗಾಗಲೇ ಜಿಲ್ಲೆಯಲ್ಲಿ ಬಾಲಕಾರ್ಮಿಕ ಮಕ್ಕಳ ಸರ್ವೆ ಕಾರ್ಯ ಕೈಗೊಳ್ಳಲಾಗಿದೆ’ ಎಂದರು.

‘ಮಕ್ಕಳನ್ನು ದುಡಿಯಲು ಕಳುಹಿಸುವ ಪಾಲಕರು ಹಾಗೂ ದುಡಿಸಿಕೊಳ್ಳುತ್ತಿರುವವರು ಕೂಡ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ ಶಿಕ್ಷೆಗೆ ಒಳಪಡುತ್ತಾರೆ’ ಎಂದು ಹೇಳಿದರು.

ಎಸ್.ಎಸ್.ಎಲ್.ಕಾನೂನು ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಡಾ.ರೇಣುಕಾ ಎಸ್‌.ಗುಬ್ಬೇವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ರಮೇಶ್‌ ಸುಂಬ್ಬಡ್‌, ಎಲ್‌.ಎಚ್‌.ಗೌಂಡಿ, ಕೊಲ್ಯಾಭ ಕೇಂದ್ರ ಡಾನ್‌ ಬಾಸ್ಕೊ ಸಂಸ್ಥೆಯ ನಿರ್ದೇಶಕ ಟಾಮಿ ಚಿರಾಕಲ್‌, ಆನಂದರಾಜ್‌, ಬಾಲಕಾರ್ಮಿಕ ಯೋಜನೆಯ ನಿರ್ದೇಶಕ ಸಂತೋಷ ಕುಲಕರ್ಣಿ ಹಾಗೂ ಪ್ರಮುಖರು ಇದ್ದರು. ಅನಿತಾ ಹುಲ್ಲುರ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.