
ಕಲಬುರಗಿ: ‘ಪ್ರತಿ ಗ್ರಾಮದ ಪ್ರವೇಶ ದ್ವಾರಕ್ಕೆ ಮತ್ತು ಶಾಲಾ–ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಫಲಕ ಅವಳವಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ 3 ತಿಂಗಳಿಗೊಮ್ಮೆ ತ್ರೈಮಾಸಿಕ ಸಭೆ ನಡೆಸಿ ಸಭಾನಡಾವಳಿಯನ್ನು ಕಚೇರಿಗೆ ಸಲ್ಲಿಸಬೇಕು’ ಎಂದರು.
‘ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲಾ– ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಬೇಕು. ಸುತ್ತಮುತ್ತ 100 ಮೀಟರ್ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ತಿಳಿಸಬೇಕು. ಪರವಾನಗಿ ಇಲ್ಲದ ಅಂಗಡಿಗಳ ಮೇಲೆ ದಾಳಿ ನಡೆಸಿ, ದಂಡ ವಿಧಿಸಬೇಕು. ತಂಬಾಕು ಮಾರಾಟ ಆಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.
ತಂಬಾಕು ನಿಯಂತ್ರಣ ಸಲಹೆಗಾರ್ತಿ ಸುಜಾತಾ ಪಾಟೀಲ ಮಾತನಾಡಿ, ‘ಜಿಲ್ಲೆಯಾದ್ಯಂತ ಕೋಟ್ಪಾ-2003 ಕಾಯ್ದೆಯಡಿ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಒಟ್ಟು 519 ಪ್ರಕರಣಗಳನ್ನು ದಾಖಲಿಸಲಾಗಿದೆ. ₹5.46 ಲಕ್ಷ ದಂಡ ಸಂಗ್ರಹಿಸಿ ಸರ್ಕಾರಕ್ಕೆ ಜಮಾ ಮಾಡಲಾಗಿದೆ’ ಎಂದು ತಿಳಿಸಿದರು.
‘ಪ್ರತಿ ಗ್ರಾಮ ಪಂಚಾಯಿತಿಯಿಂದ ಕನಿಷ್ಠ 2 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗಿದೆ. ಅಫಜಲಪುರ ತಾಲ್ಲೂಕಿನ 14 ಗ್ರಾಮಗಳು ಈಗಾಗಲೇ ಈ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಿವೆ’ ಎಂದು ಮಾಹಿತಿ ನೀಡಿದರು.
ತಂಬಾಕು ಮುಕ್ತ ಯುವ ಅಭಿಯಾನ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ರಾಜ್ಯ ತಂಬಾಕು ನಿಯಂತ್ರಣ ಕೋಶ ವಿಭಾಗೀಯ ಸಂಯೋಜಕ ಮಹೇಶ್ ಉಳ್ಳಾಗಡ್ಡಿ, ಡಿಎಚ್‌ಒ ಡಾ.ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಎನ್‌ಫೋರ್ಸ್‌ಮೆಂಟ್ ಅಧಿಕಾರಿ ಡಾ.ಶಿವಶರಣಪ್ಪ ಬಿ., ಜಿಲ್ಲಾ ಸಮೀಕ್ಷಣಾ ಅಧಿಕಾರಿ ರಾಕೇಶ್ ಕಾಂಬಳೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಜಿಲ್ಲಾ ಬಾಯಿ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಸಂಧ್ಯಾ ಕಾನೇಕರ್, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.