
ಕಲಬುರಗಿ: ‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿ, ರಾಜಕೀಯ ಲಾಭ ಮತ್ತು ಮತ ಬ್ಯಾಂಕ್ ರಾಜಕಾರಣ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ತಮ್ಮ ಕುರ್ಚಿ ಕಚ್ಚಾಟದಲ್ಲಿ ರಾಜ್ಯದ ಅಭಿವೃದ್ಧಿಯನ್ನೇ ಮರೆತಿದೆ’ ಎಂದು ಬಿಜೆಪಿ ಒಬಿಸಿ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರು ತೀವ್ರ ವಾಗ್ದಾಳಿ ನಡೆಸಿದರು.
ಕೂಡಲೇ ಪಂಚಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಆಗ್ರಹಿಸಿ ಶನಿವಾರ ನಗರದಲ್ಲಿ ಬಿಜೆಪಿ ಒಬಿಸಿ ಮೋರ್ಚಾದಿಂದ ಕುದುರೆ, ಕತ್ತೆಗಳೊಂದಿಗೆ ಜಾಥಾ ನಡೆಸಿ ವಿನೂತನ ವಾಗಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯ ಪ್ರತೀಕವಲ್ಲ. ರಾಜ್ಯದ ಸಾಲದ ಹೊರೆ ದಿನೇದಿನೇ ಹೆಚ್ಚಾಗುತ್ತಿದ್ದರೂ, ಸರ್ಕಾರಕ್ಕೆ ಯಾವುದೇ ಆರ್ಥಿಕ ಶಿಸ್ತು ಕಾಣಿಸುತ್ತಿಲ್ಲ. ತೆರಿಗೆದಾರರ ಹಣವನ್ನು ಅಯೋಗ್ಯವಾಗಿ ಬಳಸಿ, ಮುಂದಿನ ಪೀಳಿಗೆಗಳ ಮೇಲೆ ಭಾರ ಹಾಕುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಒಬಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ ಮಾತನಾಡಿ, ‘ಕಲಬುರಗಿ ನಗರದಲ್ಲಿ ಮುಖ್ಯ ರಸ್ತೆಯಿಂದ ಹಿಡಿದು ಎಲ್ಲಾ ರಸ್ತೆಗಳು ಹಾಳಾಗಿವೆ. ಅವುಗಳ ದುರಸ್ತಿಗಾಗಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಗಳ ಉದ್ಘಾಟನೆಗೆ ಮಾತ್ರ ಸೀಮಿತವಾಗಿದ್ದಾರೆ. ಸದಾ ವಿರೋಧ ಪಕ್ಷಗಳಿಗೆ ನಿಂದಿಸುವುದರಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.
ಪಂಚಗ್ಯಾರಂಟಿ ಯೋಜನೆಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಶಶಿ ಮದ್ದೂರು, ರಾಮೋಜಿ ಜ್ಯೋತಿಬಾ ಸಂಗು, ಲೋಕೇಶ್, ರಾಕೇಶ್ ಮಾಡ್ಯಾಳ, ಶಿವಾನಂದ ಕಲ್ಲೂರ್, ಕಮಲಾಕಾರ್ ಅಣ್ಣಾಕಲ್, ಸಿದ್ದು ಬುಸನೂರ್, ನಾಗು ಹತ್ತಗುಂದಿ, ಶಿವರಾಜ್ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.