ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಐದು ವರ್ಷಗಳ ಬಳಿಕ ಕಾಂಗ್ರೆಸ್ ಮತ್ತೆ ಗದ್ದುಗೆಗೆ ಏರಿದೆ.
ಪಾಲಿಕೆಯಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದಿಗಂಬರ ಅವರ ಪರಿಶಿಷ್ಟ ಪಂಗಡ (ತಳವಾರ) ಜಾತಿ ಪ್ರಮಾಣಪತ್ರವನ್ನು ಅಸಿಂಧು ಎಂದು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಘೋಷಿಸಿದ್ದರಿಂದ ಕಾಂಗ್ರೆಸ್ ಸದಸ್ಯ ಯಲ್ಲಪ್ಪ ನಾಯ್ಕೋಡಿ ಅವರು ಅವಿರೋಧವಾಗಿ ಆಯ್ಕೆಯಾದರು.
ಉಪಮೇಯರ್ ಆಗಿ ಪಾಲಿಕೆಯ 10ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಹೀನಾ ಬೇಗಂ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ–ಜೆಡಿಎಸ್ ಅಭ್ಯರ್ಥಿಯಾಗಿ ಪಾಲಿಕೆಯ ಜೆಡಿಎಸ್ ಸದಸ್ಯ ಅಲೀಂ ಪಟೇಲ್ ನಾಮಪತ್ರ ಸಲ್ಲಿಸಿದ್ದರು. ಆದರೆ, ನಂತರ ತಮ್ಮ ನಾಮಪತ್ರ ವಾಪಸ್ ಪಡೆದಿದ್ದರಿಂದ ಹೀನಾ ಬೇಗಂ ಗೆಲುವಿನ ಹಾದಿ ಸುಲಭವಾಯಿತು.
2018ರಲ್ಲಿ ಕಾಂಗ್ರೆಸ್‌ನ ಶರಣಕುಮಾರ ಮೋದಿ ಮೇಯರ್ ಆಗಿದ್ದರು. ಅದಾದ ಬಳಿಕ ಸುಮಾರು ಮೂರೂವರೆ ವರ್ಷ ಮಹಾನಗರ ಪಾಲಿಕೆಗೆ ಚುನಾವಣೆ ನಡೆದಿರಲಿಲ್ಲ.
2022ರಲ್ಲಿ ಪಾಲಿಕೆ ಚುನಾವಣೆ ನಡೆದಾಗ 55 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿತ್ತು. ಬಿಜೆಪಿಯ ವಿವಿಧ ಜಿಲ್ಲೆಗಳ ಐವರು ವಿಧಾನಪರಿಷತ್ ಸದಸ್ಯರು ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಉದ್ದೇಶದಿಂದ ಕಲಬುರಗಿಯ ವಿಳಾಸ ನೀಡಿ ಪಾಲಿಕೆಯಲ್ಲಿ ಮತದಾನದ ಹಕ್ಕು ಪಡೆದಿದ್ದರು. ಹೀಗಾಗಿ, ಬಿಜೆಪಿ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.