ADVERTISEMENT

ಕಲಬುರಗಿ | ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಬಿಜೆಪಿ‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 8:04 IST
Last Updated 22 ಆಗಸ್ಟ್ 2024, 8:04 IST
   

ಕಲಬುರಗಿ: ರಾಜ್ಯಪಾಲರ ಕುರಿತು ಕಾಂಗ್ರೆಸ್ ನಾಯಕರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

'ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ‌ನೀಡಬೇಕು' ಎಂದು ಆಗ್ರಹಿಸಿದರು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ‌ಕಚೇರಿ ತನಕ ಪ್ರತಿಭಟನಾ ಜಾಥಾ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸುಮಾರು 40 ನಿಮಿಷಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು‌ ಆಕ್ರೋಶ ‌ವ್ಯಕ್ತಪಡಿಸಿದರು.

ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ತಪ್ಪು ಮಾಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು, ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಆರೋಪ ಕೇಳಿ ಬಂದಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಆಗ ವಿರೋಧ ಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಸರಿಯಾಗಿದೆ ಎಂದಿದ್ದರು. ಈಗ ಅಂಥದ್ದೆ ಸಂದರ್ಭದಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ಇದಕ್ಕೆ ಏನು ಹೇಳುತ್ತೀರಿ ಸಿದ್ದರಾಮಯ್ಯ ಅವರೇ? ಎಂದು ಪ್ರಶ್ನಿಸಿದರು.

ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಮಾಜಿ ಶಾಸಕರಾದ ರಾಜಕುಮಾರ್ ಪಾಟೀಲ ತೇಲ್ಕೂರ, ದತ್ತಾತ್ರೇಯ ಪಾಟೀಲ ರೇವೂರ, ಅಮರನಾಥ ಪಾಟೀಲ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ‌ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ತಳವಾರ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಉಪ ವಿಭಾಗಾಧಿಕಾರಿ ರೂಪಿಂದರ್ ಸಿಂಗ ಕೌರ್ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

ಸಂಚಾರ ಮಾರ್ಗ ಬದಲು: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರಿಂದ ತಿಮ್ಮಾಪುರಿ ವೃತ್ತದಿಂದ ಜಗತ್ ವೃತ್ತದತ್ತ ಸಾಗುವ ವಾಹನಗಳನ್ನು ಪೊಲೀಸರು ಜಿಲ್ಲಾ ಕೋರ್ಟ್ ರಸ್ತೆಯ ಮೂಲಕ ಹೋಗುವಂತೆ ಕ್ರಮವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.