
ಕಲಬುರಗಿ: ಜಿಲ್ಲೆಯಾದ್ಯಂತ ಜಿಲ್ಲಾ ಖನಿಜ ನಿಧಿ ಅನುದಾನದಡಿ ಈಗಾಗಲೇ ಕ್ರಿಯಾ ಯೋಜನೆಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಫೆ.10ರೊಳಗೆ ಆರಂಭಿಸಬೇಕು ಎಂದು ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಸೂಚಿಸಿದರು.
ಶುಕ್ರವಾರ ಈ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ನಿಗದಿತ ಅವಧಿಯಲ್ಲಿ ಕಾಮಗಾರಿ ಆರಂಭಿಸದಿದ್ದರೆ ಅಂತಹ ಕಾಮಗಾರಿಗಳನ್ನು ಕೈಬಿಟ್ಟು, ಉಳಿತಾಯದ ಅನುದಾನದಡಿ ಅವಶ್ಯವಿರುವ ಇತರೆ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ಆರಂಭಕ್ಕೆ ವಿಳಂಬ ಸಹಿಸುವುದಿಲ್ಲ’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
‘ಈಗಾಗಲೇ ಕ್ರಿಯಾ ಯೋಜನೆಯಡಿ ಅನುಮೋದನೆಗೊಂಡಿರುವ ಕಾಮಗಾರಿಗಳ ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯಲು 3 ದಿನದೊಳಗೆ ಕಚೇರಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ಅನುಷ್ಠಾನ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿಸಿಎಫ್ ಸುಮಿತ್ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಸೋಮಶೇಖರ ಸೇರಿದಂತೆ ವಿವಿಧ ಇಲಾಖೆ ಅನುಷ್ಠಾನ ಏಜೆನ್ಸಿಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.