
ಕೈದಿಗಳು
ಕಲಬುರಗಿ: ಇಲ್ಲಿನ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪದೇಪದೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕುರಿತು ತನಿಖೆ ನಡೆಸಲು ಕಾರಾಗೃಹಗಳ ಇಲಾಖೆಯ ಹೆಚ್ಚುವರಿ ಮಹಾನಿರೀಕ್ಷಕ ಪಿ.ವಿ.ಆನಂದ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು ಮದ್ಯ ಕುಡಿಯುತ್ತ, ಇಸ್ಪೀಟ್ ಆಡುತ್ತಿರುವ ವಿಡಿಯೊ ಬುಧವಾರ ಹರಿದಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
‘ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ನಡೆದಿರುವ ಆರೋಪ ಕುರಿತು ಕುರಿತ ತನಿಖೆ ಕೈಗೊಳ್ಳಲು ಪಿ.ವಿ.ಆನಂದ ರೆಡ್ಡಿ ಅವರನ್ನು ನೇಮಿಸಲಾಗಿದೆ. ಅವರು ಜನವರಿ 2ರಿಂದಲೇ ಪೂರ್ವಭಾವಿ ವಿಚಾರಣೆ ಆರಂಭಿಸಲಿದ್ದಾರೆ. ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಜನವರಿ 3ರಂದು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಲಿದ್ದಾರೆ’ ಎಂದು ಕಾರಾಗೃಹಗಳ ಇಲಾಖೆಯ ಪ್ರಕಟಣೆ ತಿಳಿಸಿದೆ.
ಪ್ರಕರಣ ದಾಖಲು: ಕೈದಿಗಳು ಮದ್ಯ ಕುಡಿಯುತ್ತ, ಇಸ್ಪೀಟ್ ಆಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಬುಧವಾರ ಹರಿದಾಡಿರುವುದಕ್ಕೆ ಸಂಬಂಧಿಸಿದಂತೆ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಆರ್.ಅನಿತಾ ಅವರ ದೂರಿನನ್ವಯ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.