
ಕಲಬುರಗಿ: ‘ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರೊ.ಶಂಕರರೆಡ್ಡಿ ಪಾಟೀಲ ಅವರು ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ’ ಎಂದು ಜೆಡಿಯು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಕೆ.ನಾಗರಾಜ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ’ ಎಂದರು.
‘ಪ್ರಸ್ತುತ ರಾಜಕಾರಣ ಮೌಲ್ಯ ಕಳೆದುಕೊಳ್ಳುತ್ತಿದೆ. ಜನಪ್ರತಿನಿಧಿಗಳು ಹಣದ ಹಿಂದೆ ಓಡುತ್ತಿದ್ದಾರೆ. ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ರಾಜಕೀಯದ ಅಗತ್ಯವಿದೆ. ಸಾವಯವ ರಾಜಕಾರಣ ಮುನ್ನೆಲೆಗೆ ಬರಬೇಕಾಗಿದೆ. ಹಣ ಮತ್ತು ಹೆಂಡ ಹಂಚದೆ ಒಂದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ಒಂದು ವೇಳೆ ಅವರು ಬೆಂಬಲ ನೀಡಿದರೆ ಸ್ವಾಗತ. ಗೆಲುವು ಮುಖ್ಯವಲ್ಲ. ಸರಿಯಾದ ಮಾರ್ಗದಲ್ಲಿ ಚುನಾವಣೆ ಎದುರಿಸುವುದೇ ನಮ್ಮ ಧ್ಯೇಯ’ ಎಂದರು.
‘ಜನ ಪರ್ಯಾಯ ರಾಜಕಾರಣಕ್ಕೆ ಮನ್ನಣೆ ನೀಡಬೇಕು. ಕೆ.ಆರ್.ಎಸ್, ಆಮ್ ಆದ್ಮಿ ಪಕ್ಷದವರ ಜೊತೆ ಪರ್ಯಾಯ ರಾಜಕಾರಣದ ಕುರಿತು ಚರ್ಚಿಸಿದ್ದೇವೆ. ಸಾವಯವ ರಾಜಕಾರಣವನ್ನು 2,000 ಮಠಾಧೀಶರು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ. ಆದ ಕಾರಣ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಬಲಪಡಿಸಲಾಗುತ್ತಿದೆ’ ಎಂದು ಹೇಳಿದರು.
‘ಮಹಾಗಾಂವ ತಾಲ್ಲೂಕು ರಚನೆಗೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟವನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.
ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸುಭಾಶ್ಚಂದ್ರ ಜಿ.ಖಪಾಟೆ, ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಶಂಕರರೆಡ್ಡಿ ಪಾಟೀಲ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.