ಕಲಬುರಗಿ: ‘ಹೊರಗುತ್ತಿಗೆ ಪದ್ಧತಿ ರದ್ದುಗೊಳಿಸಿ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು’ ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಐದು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಮುಖಂಡ ವಿ.ಜಿ.ದೇಸಾಯಿ ಮಾತನಾಡಿ,‘ಎಲ್ಲ ಜಿಲ್ಲೆಗಳಲ್ಲಿ ವಿವಿಧೋದ್ದೇಶ ಕಾರ್ಮಿಕರ ಸಹಕಾರ ಸಂಘ ರಚಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಕನಿಷ್ಠ ವೇತನ ಹೆಚ್ಚಳ ಕುರಿತ ರಾಜ್ಯ ಸರ್ಕಾರದ ಅಧಿಸೂಚನೆ ಕೂಡಲೇ ಸರ್ಕಾರಿ ಆದೇಶವಾಗಿ ಮಾರ್ಪಡಿಸಬೇಕು. ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಪ್ರಾರಂಭಿಸಬೇಕು. ಎಲ್ಲ ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ₹36 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.
ಬಳಿಕ ತಮ್ಮ ಬೇಡಿಕೆಗಳ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಎಂ.ಜಿ., ಜಿಲ್ಲಾ ಕಾರ್ಯದರ್ಶಿ ಶರಣು ಹೇರೂರ, ಬಸವರಾಜ ಹುಳಗೋಳ, ರಮೇಶ ಕುಂಬಾರ, ಅಶೋಕ ಅಂಬಲಗಿ, ಸಂಗಮ್ಮ, ಸಂತೋಷ ದೊಡ್ಡಮನಿ, ರಾಜು ಒಡೆಯರ್, ಶರಣಮ್ಮ ಕಟ್ಟಿಮನಿ, ಮಲ್ಲಮ್ಮ ನಾಟಿಕರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.