
ಕಲಬುರಗಿ: ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವುದರಿಂದ ಅವರ ಜೀವನ ಉಜ್ವಲವಾಗುತ್ತದೆ ಎಂದು ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣ ಗ್ರಾಮದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿ, ‘ಜಿಲ್ಲೆಯಲ್ಲಿ ಒಟ್ಟು 5,80,045 ಮನೆಗಳಿದ್ದು, ಐದು ವರ್ಷದೊಳಗಿನ ಮಕ್ಕಳ ಸಂಖ್ಯೆ 3,50,716 ಆಗಿದೆ’ ಎಂದು ಮಾಹಿತಿ ನೀಡಿದರು.
ಮೊದಲನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ 1,519 ಲಸಿಕಾ ಕೇಂದ್ರಗಳನ್ನು ರಚಿಸಲಾಗಿದೆ. ನಿಗದಿತ ಗುರಿಯನ್ನು ಸಾಧಿಸಲು ಅಧಿಕಾರಿಗಳು ಹಾಗೂ ಸ್ವಯಂಸೇವಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ‘ವಿಶ್ವದ ಕೆಲವು ಭಾಗಗಳಲ್ಲಿ ವೈಲ್ಡ್ ಪೋಲಿಯೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಈ ವೈರಸ್ ಪ್ರವೇಶಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಕಟ್ಟುನಿಟ್ಟಾಗಿ ಆಯೋಜಿಸಲಾಗಿದೆ. ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಲಬುರಗಿ ವಿಭಾಗ ನಿರ್ದೇಶಕ ಡಾ. ಅಂಬಾರಾಯ ಎಸ್. ರುದ್ರವಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ, ಪೋಲಿಯೊ ಸರ್ವೇಕ್ಷಣಾಧಿಕಾರಿ ಡಾ.ಅನಿಲ ತಾಳಿಕೋಟೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಾರುತಿ ಕಾಂಬಳೆ ಹಾಜರಿದ್ದರು.
ಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ರುಕ್ಕಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಭೀಮಶಂಕರ್ ಹಿರೇಸಾವಳಗಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸಂಗೀತಾ ಮಾಲೆ, ಡಿಡಿಪಿಐ ಸೂರ್ಯಕಾಂತ್ ಮದಾನೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಕಾಂತ್ ನರಿಬೋಳಿ, ಪಟ್ಟಣ ಗ್ರಾ.ಪಂ. ಸದಸ್ಯರು, ಮುಖಂಡರು, ಗ್ರಾಮಸ್ಥರು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು. ಆರೋಗ್ಯ ಇಲಾಖೆಯ ಸಿಬ್ಬಂದಿ, ಪಟ್ಟಣ ಆಯುಷ್ಮಾನ್ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.