ADVERTISEMENT

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ; ಜಿಲ್ಲಾಧಿಕಾರಿ ಯಶವಂತ

​ಪ್ರಜಾವಾಣಿ ವಾರ್ತೆ
Published 31 ಮೇ 2022, 15:57 IST
Last Updated 31 ಮೇ 2022, 15:57 IST
ಕಲಬರಗಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯುವ ‘ಸ್ಪಂದನ ಕಲಬುರಗಿ’ಕಾರ್ಯಕ್ರಮದ ಹಿನ್ನಲೆಯಲ್ಲಿ ಮಂಗಳವಾರ ಕಚೇರಿ ಆವರಣ ಪರಿಶೀಲಿಸಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್
ಕಲಬರಗಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯುವ ‘ಸ್ಪಂದನ ಕಲಬುರಗಿ’ಕಾರ್ಯಕ್ರಮದ ಹಿನ್ನಲೆಯಲ್ಲಿ ಮಂಗಳವಾರ ಕಚೇರಿ ಆವರಣ ಪರಿಶೀಲಿಸಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್   

ಕಲಬುರಗಿ: ವಿವಿಧ ಇಲಾಖೆಗಳ ಸಮಕ್ಷಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಿ ಅವುಗಳಿಗೆ ತ್ವರಿತವಾಗಿ ಪರಿಹಾರ ನೀಡಲು ‘ಸ್ಪಂದನ ಕಲಬುರಗಿ’ ಕಾರ್ಯಕ್ರಮವನ್ನು ಬುಧವಾರ(ಜೂ.1) ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ. ಸಾರ್ವಜನಿಕರುಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದರು.

ಆಡಳಿತಕ್ಕೆ ವೇಗ ನೀಡಲು ಮತ್ತು ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಲು ‘ಸ್ಪಂದನ ಕಲಬುರಗಿ’ ಎಂಬ ಪ್ರಯೋಗಾತ್ಮಕ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಂಡಿದೆ. ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30ವರೆಗೆ ಜರುಗಲಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳು ಅಥವಾ ಸರ್ಕಾರಿ ಕಚೇರಿಯಲ್ಲಿ ಅರ್ಜಿ ವಿಲೇವಾರಿಯಲ್ಲಿ ವಿಳಂಬ ಮಾಡುತ್ತಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು. ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಇಲಾಖಾವಾರು 24 ಮಳಿಗೆಗಳು ತೆರೆಯಬೇಕು. ವೇದಿಕೆ ನಿರ್ಮಾಣ, ಹೂವಿನ ಆಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಅರ್ಜಿದಾರರು ಮಳಿಗೆಯಲ್ಲಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಕಂದಾಯ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ಆರೋಗ್ಯ, ಭೂ ದಾಖಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣಯಂತಹ 24 ಇಲಾಖೆಗಳ ಸಿಬ್ಬಂದಿ ಅರ್ಜಿಗಳನ್ನು ಸ್ವೀಕರಿಸುವರು. ಜತೆಗೆ ಆಯಾ ಇಲಾಖೆಯ ಯೋಜನೆಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡುವರು ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಗೆ ದಾಖಲೆಗಳ ನಿರ್ವಹಣೆ ಮಾಡುವಂತೆ ಸಹ ಸಂಬಂಧಿಸಿದ ಅಧಿಕಾರಿಗಳಿಗೆ ಗುರುಕರ್ ಸೂಚಿಸಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳ ಮಹತ್ವಕಾಂಕ್ಷೆ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಜಿಲ್ಲೆಯ ಜನಪ್ರತಿನಿಧಿಗಳಿಂದ ಇದೇ ಸಂದರ್ಭದಲ್ಲಿ ವಿತರಿಸಲಾಗುವುದು. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಸಭೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣ ಪರಿಶೀಲಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಡಾ.ಶಂಕರಪ್ಪ ವಣಿಕ್ಯಾಳ ಇತರೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.