ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಎರಡನೇ ಅವಧಿಯ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯ ಯಲ್ಲಪ್ಪ ನಾಯ್ಕೋಡಿ ಅವರು ಮೇಯರ್ ಹಾಗೂ ಅದೇ ಪಕ್ಷದ ಹೀನಾ ಬೇಗಂ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾದರು.
ಯಲ್ಲಪ್ಪ ನಾಯ್ಕೋಡಿ ಅವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ದಿಗಂಬರ ಅವರ ತಳವಾರ ಎಸ್ಟಿ ಜಾತಿ ಪ್ರಮಾಣಪತ್ರವನ್ನು ಅಸಿಂಧುಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿಯಾಗಿದ್ದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಘೋಷಿಸಿದರು. ಹೀಗಾಗಿ ಯಲ್ಲಪ್ಪ ಅವಿರೋಧವಾಗಿ ಆಯ್ಕೆಯಾದರು.
ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ 10ನೇ ವಾರ್ಡ್ ಸದಸ್ಯೆ ಹೀನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಪಾಲಿಕೆಯ ಜೆಡಿಎಸ್ ಸದಸ್ಯ ಅಲೀಂ ಪಟೇಲ್ ನಾಮಪತ್ರ ಸಲ್ಲಿಸಿದ್ದರಾದರೂ ಕೊನೆಗಳಿಗೆಯಲ್ಲಿ ವಾಪಸ್ ಪಡೆದರು.
ಹೀಗಾಗಿ ಹೀನಾ ಬೇಗಂ ಉಪಮೇಯರ್ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾದರು.
ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ್, ಬಿಜೆಪಿ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ. ಪಾಟೀಲ ಇತರರು ಭಾಗವಹಿಸಿದ್ದರು.
ಮೇಯರ್ ಹೆಸರು ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.