ADVERTISEMENT

ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ: ಜಿಲ್ಲಾಧಿಕಾರಿ ಮನವಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 4:50 IST
Last Updated 27 ಜುಲೈ 2020, 4:50 IST
ಜಿಲ್ಲಾಧಿಕಾರಿ ಶರತ್ ಬಿ.
ಜಿಲ್ಲಾಧಿಕಾರಿ ಶರತ್ ಬಿ.   

ಕಲಬುರ್ಗಿ: ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ, ಕ್ಲಿನಿಕ್ ಸಿಬ್ಬಂದಿ ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹರಡುವಿಕೆ ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ತುರ್ತು ಪರಿಸ್ಥಿತಿ ಈ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಮಹಾಮಾರಿಗೆ ಹೆದರಿ ಬಹುತೇಕ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಆಗುತ್ತಿರುವುದು ಗಮನಕ್ಕೆ ಬಂದಿದೆ. ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಸಿಬ್ಬಂದಿಗಳೇ ಇಲ್ಲದಿದ್ದರೆ ಚಿಕಿತ್ಸೆಗೆ ತುಂಬಾ ತೊಂದರೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ADVERTISEMENT

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್–19 ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರ ಆದೇಶಿಸಿರುವುದರಿಂದ ರೋಗಿಗೆ ಸೂಕ್ತ ಚಿಕಿತ್ಸೆ ನೀಡಲು ಆಯಾ ಆಸ್ಪತ್ರೆ ಮುಖ್ಯಸ್ಥರು ತಮ್ಮ ಸಿಬ್ಬಂದಿಯನ್ನು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಶರತ್ ಬಿ. ತಿಳಿಸಿದ್ದಾರೆ.

ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕ್ರಮ: ಆರೋಗ್ಯ ಸಿಬ್ಬಂದಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ

ಟಿ.ಎಚ್.ಒ ಮತ್ತು ಪೊಲೀಸ್ ಠಾಣೆಗೆ ಮಾಹಿತಿ ನೀಡಿ: ಸಿಬ್ಬಂದಿ ಗೈರಾದಲ್ಲಿ ಕೂಡಲೇ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.