ರಾಜಕುಮಾರ ಪಾಟೀಲ
ಕಲಬುರಗಿ: ‘ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ. ರಾಜ್ಯದ ಜನರಿಗೂ ವಿಶ್ವಾಸ ಇಲ್ಲ’ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ‘15 ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇ ಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ಹೇಳಿಕೆ ಬರುತ್ತಿವೆ. ಬಿ.ಆರ್.ಪಾಟೀಲರ ಹೇಳಿಕೆ, ರಾಜು ಕಾಗೆಯವರ ಹೇಳಿಕೆಗಳನ್ನು ಗಮನಿಸಿದರೆ ಆಡಳಿತ ಪಕ್ಷದಲ್ಲಿ ಶಾಸಕರು ಮುಖ್ಯಮಂತ್ರಿ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ’ ಎಂದು ತಿಳಿಸಿದ್ದಾರೆ.
‘ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ. ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ರಸ್ತೆಗಳು, ಅಭಿವೃದ್ಧಿ ಕೆಲಸ ಆಗಬೇಕೆಂದಿದ್ದರೆ ಗ್ಯಾರಂಟಿಗಳನ್ನು ನಾವು ನಿಲ್ಲಿಸುತ್ತೇವೆ ಎಂದಿರುವುದೇ ಸ್ಪಷ್ಟ ಪುರಾವೆ. ರಾಜ್ಯ ಸರ್ಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ನಾಡಿನ ಜನರು ಭ್ರಷ್ಟ, ಜನವಿರೋಧಿ, ರೈತವಿರೋಧಿ ಸರ್ಕಾರಕ್ಕೆ ಮತ ಕೊಟ್ಟು ಅಧಿಕಾರಕ್ಕೆ ತಂದಿರುವುದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರೆ’ ಎಂದು ತೇಲ್ಕೂರ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.