ADVERTISEMENT

‘ಸಿದ್ಧತೆ ಮಾಡಿಕೊಳ್ಳದ ಸರ್ಕಾರ’

ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಟೀಕೆ

​ಪ್ರಜಾವಾಣಿ ವಾರ್ತೆ
Published 1 ಮೇ 2021, 6:20 IST
Last Updated 1 ಮೇ 2021, 6:20 IST
ಕನೀಜ್ ಫಾತಿಮಾ
ಕನೀಜ್ ಫಾತಿಮಾ   

ಕಲಬರ್ಗಿ: ‘ಕೋವಿಡ್–19 ಎರಡನೇ ಅಲೆ ಸಂಭವ ಇದೆ ಎಂದು ತಜ್ಞರಿ ಎಚ್ಚರಿಸಿದ್ದರೂ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ
ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ರೆಮ್‌ಡೆಸಿವಿರ್ ಇಂಜೆಕ್ಷನ್‌ಗಳ ಕೊರತೆ ಎದುರಾಗಿದೆ. ಇತ್ತೀಚೆಗೆ ಸಂಸದ ಡಾ. ಉಮೇಶ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಾಗ ಜಿಮ್ಸ್ ಮತ್ತು ಇಎಸ್‍ಐಸಿ ಆಸ್ಪತ್ರೆಯಲ್ಲಿ ಬೆಡ್ ಹೆಚ್ವಿಸುವ ಭರವಸೆಯೂ ದೊರೆತಿತ್ತು. ಆದರೆ ಈವರೆಗೂ ಸಾಧ್ಯವಾಗಿಲ್ಲ’ ಎಂದರು.

ನಗರದ ಬಸವೇಶ್ವರ ಆಸ್ಪತ್ರೆಗೆ ಇನ್ನೊಂದು ಆಕ್ಸಿಜನ್ ಘಟಕಕ್ಕೆ ಒಪ್ಪಿಗೆ ನೀಡುವಂತೆ ಕೋರಿತ್ತು. ಆದರೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಇಎಸ್‍ಐಸಿನಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ಪ್ರಸ್ತಾವ ಸಲ್ಲಿಸಲಾಗಿತ್ತು. ಈವರೆಗೂ ಮಾಡಲು ಸಾಧ್ಯವಾಗಿಲ್ಲ. ಘಟಕ ಇದ್ದಿದ್ದರೆ ಅಲ್ಲಿಯೇ ನೂರಾರು ಬೆಡ್‌ಗಳನ್ನು ಅಳವಡಿಸಬಹುದಾಗಿತ್ತು’ ಎಂದು ಹೇಳಿದರು.

ADVERTISEMENT

ಉಸ್ತುವಾರಿ ಸಚಿವರನ್ನು ಬದಲಿಸಿ: ಕಲಬುರ್ಗಿ ಜಿಲ್ಲೆಗೆ ಉಸ್ತುವಾರಿ ಸಚಿವರೇ ಇಲ್ಲದಂತಾಗಿದೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ನೋಡಿಕೊಳ್ಳುತ್ತಿದ್ದರೂ ಇತ್ತ ಸುಳಿಯುತ್ತಲೇ ಇಲ್ಲ. ತಿಂಗಳಲ್ಲಿ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿದರೂ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣಬಹುದಾಗಿದೆ. ಜಿಲ್ಲೆಯ ಶಾಸಕರನ್ನು ಸಚಿವರನ್ನಾಗಿ ಮಾಡಿ ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಒತ್ತಾಯಿಸಿದರು.

ಲಾಕ್‍ಡೌನ್‍ನಿಂದಾಗಿ ಬೀದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಚಾಲಕರು ತೀವ್ರ ಸಂಕಷ್ಟದಲ್ಲಿದ್ದು, ಕೂಲಿ ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪ್ರತಿ ತಿಂಗಳು ಈ ಜನರಿಗೆ ಪರಿಹಾರ ರೂಪದಲ್ಲಿ ಹಣ ನೀಡಬೇಕು. ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸಾವು–ನೋವುಗಳ ಖಚಿತ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ರಂಜಾನ್ ಹಬ್ಬವಿದ್ದು, ಲಾಕ್‍ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ, ಆರೋಗ್ಯ ಸಚಿವರು ಭರವಸೆ ನೀಡಿದ್ದರು. ಆದರೆ ದಿಢೀರ್ ಲಾಕ್‍ಡೌನ್ ಮಾಡಿದ್ದಾರೆ. ರಾಜ್ಯ ಸರ್ಕಾರದ ಬಳಿ ನಿಯಂತ್ರಣ ಇಲ್ಲ. ಒಬ್ಬೊಬ್ಬರು ಒಂದೊಂದು ತೆರನಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕನೀಜ್ ಫಾತಿಮಾ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.