ADVERTISEMENT

ಕಲಬುರ್ಗಿ: ತೊಗರಿಗೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಾಂತ ರೈತ ಸಂಘ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 12:30 IST
Last Updated 17 ಫೆಬ್ರುವರಿ 2021, 12:30 IST
ರೈತ ಕಾರ್ಮಿಕರ ಬೇಡಿಕೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಕಲಬುರ್ಗಿಯ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ರೈತ ಕಾರ್ಮಿಕರ ಬೇಡಿಕೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಕಲಬುರ್ಗಿಯ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ತೊಗರಿಗೆ ₹ 8,750 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಕಳೆದ 44 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳಾಗಲೀ, ಜಿ‌ಲ್ಲಾಧಿಕಾರಿಗಳಾಗಲೀ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮಂಗಳವಾರ ನಗರದ ಎಸ್‌ವಿಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಎಂ.ಎಸ್‌. ಸ್ವಾಮಿನಾಥನ್ ವರದಿಯ ಅನುಸಾರ ವಾಣಿಜ್ಯ ಬೆಳೆಯಾದ ತೊಗರಿಗೆ ₹ 8750 ಬೆಲೆ ನಿಗದಿ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರ ₹ 6 ಸಾವಿರ ಮಾತ್ರ ನಿಗದಿ ಮಾಡಿದೆ. ಹಾಗಾಗಿ, ಉಳಿದ ₹ 2750ನ್ನು ನಷ್ಟ ಪರಿಹಾರವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಮೊದಲು ಪ್ರತಿಯೊಬ್ಬರ ಖಾತೆಗೆ ₹ 15 ಲಕ್ಷ ಜಮಾ ಮಾಡುವುದಾಗಿ ಭರವಸೆ ನೀಡಿತ್ತು. ಪೆಟ್ರೋಲ್, ಡೀಸೆಲ್ ಬೆಲೆಯನ್ನು ₹ 35ಕ್ಕೆ ಇಳಿಸುವುದಾಗಿ ಹೇಳಿತ್ತು. ಆದರೆ, ಇದೀಗ ಪೆಟ್ರೋಲ್ ದರ ₹ 100ಕ್ಕೆ ಬಂದಿದೆ. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದರೆ ಸ್ವರ್ಗ ಮಾಡುತ್ತೇವೆ ಎಂದು ಹೇಳಿದ್ದ ಬಿಜೆಪಿ ಶಾಸಕರನ್ನು ಅಕ್ರಮ ಮಾರ್ಗದಲ್ಲಿ ಖರೀದಿಸಿ ಇದೀಗ ಸರ್ಕಾರ ರಚಿಸಿ ದುರಾಡಳಿತ ನಡೆಸುತ್ತಿದೆ. ಈ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ತೊಗರಿಗೆ ₹ 2 ಸಾವಿರ ಪ್ರೋತ್ಸಾಹಧನ ಕೇಳಿದರೂ ಕೊಡಲಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಗ್ರಾಮೀಣ ಪ್ರದೇಶದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಬಡ ಕೂಲಿ ಕಾರ್ಮಿಕರಿಗೆ ಕೆಲಸ ಒದಗಿಸುವ ಒಂದು ಕಾಯ್ದೆಯಾಗಿ ರೂಪುಗೊಂಡಿದ್ದು, ಕೆಲಸದ ಚಿಂತೆಯನ್ನು ಕಡಿಮೆ ಮಾಡಿದೆ. ಆದರೆ, ಕೇಂದ್ರ ಸರ್ಕಾರ ಈ ಯೋಜನೆಗೆ ಬಜೆಟ್‌ನಲ್ಲಿ ಕಳೆದ ಸಾಲಿಗಿಂತ ಶೇ 25ರಷ್ಟು ಅನುದಾನ ಹೆಚ್ಚಳ ಮಾಡಬೇಕಿತ್ತು. ಆದರೆ, ದುರದೃಷ್ಟವಶಾತ್ ಕಡಿಮೆ ಮಾಡಿದೆ. ಕನಿಷ್ಟ ಕೂಲಿಯನ್ನು ₹ 275ರಿಂದ ₹ 600ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

2020–21ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಅಕುಶಲ ಕಾರ್ಮಿಕರಿಗೆ ₹ 424 ಕೂಲಿ ನಿಗದಿಪಡಿಸಿದ್ದು, ಕಾರ್ಮಿಕ ಇಲಾಖೆಯ ಮಾರ್ಗದರ್ಶನದಂತೆ ಉದ್ಯೋಗ ಖಾತ್ರಿ ಯೋಜನೆಯಡಿ ಇಲಾಖೆ ನಿಗದಿಪಡಿಸಿದ ಕೂಲಿ ಜಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ವೆಯಂತೆ ಪ್ರತಿ ಮೂರು ಮಕ್ಕಳಲ್ಲಿ ಎರಡು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತವೆ ಎಂದು ವರದಿ ಹೇಳುತ್ತದೆ. ಆದ್ದರಿಂದ ಪ್ರತಿಯೊಬ್ಬರಿಗೆ ಪಡಿತರ ಚೀಟಿಯ ಮೂಲಕ 1 ಕೆ.ಜಿ. ತೊಗರಿ ಮತ್ತು ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಬೇಕು. ಕಾಳಗಿ ತಾಲ್ಲೂಕಿನ ಕಣಸೂರ ಗ್ರಾಮವು ಬೆಣ್ಣೆ ತೊರಾ ನೀರಿನ ಹರಿವಿನಿಂದ ಮುಳುಗಡೆಯಾಗುತ್ತಿದ್ದು, ಗ್ರಾಮವನ್ನು ಸ್ಥಳಾಂತರಗೊಳಿಸಬೇಕು. ಕಮಲಾಪುರ ತಾಲ್ಲೂಕಿನ ತಡಕಲ್ ಗ್ರಾಮದ ನಿವೇಶನಕ್ಕಾಗಿ ಹಣ ಮಂಜೂರಾತಿ ಮಾಡಲು ಕ್ರಮ ಕೈಗೊಳ್ಳಬೇಕು. ಪಟ್ಟಣ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಕೆಲಸ ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕಾರ್ಯದರ್ಶಿ ಅಶೋಕ ಮ್ಯಾಗೇರಿ, ಉಪಾಧ್ಯಕ್ಷ ಮಲ್ಲಣ್ಣಗೌಡ ಬನ್ನೂರ, ಸಹ ಕಾರ್ಯದರ್ಶಿ ಪಾಂಡುರಂಗ ಮಾವಿನಕರ, ಶಾಂತಪ್ಪ ಪಾಟೀಲ, ಸುಭಾಷ್ ಹೊಸಮನಿ, ಕಾಶಿನಾಥ ಎಂ. ಬಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.