ADVERTISEMENT

ಕೃಷಿ ಕಾಯಕ ರತ್ನ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 5:36 IST
Last Updated 24 ಡಿಸೆಂಬರ್ 2025, 5:36 IST
ಕಲಬುರಗಿಯ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರು, ರೈತ ಮಹಿಳೆಯರಿಗೆ ಕೃಷಿ ಕಾಯಕ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು
ಕಲಬುರಗಿಯ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರು, ರೈತ ಮಹಿಳೆಯರಿಗೆ ಕೃಷಿ ಕಾಯಕ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು   

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ, ಕೃಷಿ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಆಶ್ರಯದಲ್ಲಿ ನಗರದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ 21 ಪ್ರಗತಿಪರ ರೈತರು/ರೈತ ಮಹಿಳೆಯರಿಗೆ ಕೃಷಿ ಕಾಯಕ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾಗಿರುವ ಬೆಳೆಗಳಿಗೆ ₹498.73 ಕೋಟಿ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ‘ಜಿಲ್ಲೆಯ ರೈತರಲ್ಲಿ ಬೆಳೆ ವಿಮೆ ಕುರಿತಂತೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಕಲಬುರಗಿ ರೊಟ್ಟಿ ಕಾರ್ಯಕ್ರಮ ಪಾರಂಭಿಸಿದಾಗಿನಿಂದ ಬಹಳಷ್ಟು ರೈತ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡಿದಂತಾಗಿದೆ’ ಎಂದು ತಿಳಿಸಿದರು.

ADVERTISEMENT

ಜಂಟಿ ಕೃಷಿನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ‘2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ₹656.56 ಕೋಟಿ ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗಿರುತ್ತದೆ. ಅಲ್ಲದೆ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 3,00,952 ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿದ್ದು, ಬೆಳೆ ವಿಮೆ ಮಧ್ಯಂತರ ಪರಿಹಾರ ₹234.73 ಕೋಟಿ ಹಾಗೂ ಸ್ಥಳೀಯ ವಿಕೋಪದಡಿ ₹8.90 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್‌ ಖಾತೆಗೆ ಜಮೆ ಆಗಲಿದೆ’ ಎಂದು ತಿಳಿಸಿದರು.

ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ದಂಗಾಪೂರ ಅವರು, ಕೃಷಿಕ ಸಮಾಜ ನಡೆಸಿಕೊಂಡು ಬಂದ ಚಟುವಟಿಕೆಗಳು ಹಾಗೂ ಜಿಲ್ಲೆಯ ರೈತರಿಗೆ ಸರ್ಕಾರದಿಂದ ನೀಡಲಾದ ಬೆಳೆಹಾನಿ ಪರಿಹಾರ, ಬೆಳೆ ವಿಮೆ ಹಾಗೂ ಇತರೆ ವಿಷಯಗಳ ಕುರಿತು ತಿಳಿಸಿದರು.

ಜಿಲ್ಲಾ ಕೃಷಿಕ ಸಮಾಜದ ಪ್ರತಿನಿಧಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳು, ಹಾಗೂ ರೈತ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.