ಕಲಬುರಗಿ: ಆಂದೋಲಾ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ಸಮುದಾಯದ ಮುಖಂಡ ಚಂದು ಪಾಟೀಲ, ಶಾಸಕ ಬಸವರಾಜ ಮತ್ತಿಮೂಡ ಅವರ ಹತ್ಯೆಗೆ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದ್ದು, ಕೂಡಲೇ ಸರ್ಕಾರ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ದೀಕ್ಷ ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಪಪ್ಪಾ ಒತ್ತಾಯಿಸಿದ್ದಾರೆ.
ಶುಕ್ರವಾರ ಭಾಲ್ಕಿ ತಾಲ್ಲೂಕಿನಲ್ಲಿ ಸಚಿನ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಡೆತ್‌ನೋಟ್‌ನಲ್ಲಿ ಹಲವರ ಹೆಸರುಗಳನ್ನು ಬರೆದಿದ್ದಾರೆ. ಅಲ್ಲಿ ಸ್ವಾಮೀಜಿಗಳ, ಜನಪ್ರತಿನಿಧಿಗಳ ಹೆಸರನ್ನು ಬರೆದಿರುವುದು ಅಚ್ಚರಿ ಮೂಡಿಸಿದೆ. ಸಾವಿಗೂ ಮುನ್ನ ಯಾವ ವ್ಯಕ್ತಿಯೂ ಸುಳ್ಳು ಹೇಳುವುದಿಲ್ಲ ಎಂಬ ನಂಬಿಕೆ ಎಲ್ಲರಲ್ಲಿದೆ. ಇದರ ಕುರಿತು ಸರ್ಕಾರ ಶೀಘ್ರ ತನಿಖೆ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಘಟನೆಗಳನ್ನು ನೋಡಿದಾಗ ಭಯದ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ನಗರ ಪೊಲೀಸ್ ಕಮಿಷನರ್, ಎಸ್‌ಪಿ ಅವರು ಕ್ರಮ ಕೈಗೊಳ್ಳಬೇಕಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಜಿಲ್ಲೆಯ ಜನತೆಯಲ್ಲಿ ನೆಮ್ಮದಿ ನೀಡುವ ಕೆಲಸವನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಮಾಡುವುದರ ಜೊತೆಗೆ ಸ್ವಾಮೀಜಿ ಸೇರಿ ಮುಖಂಡರಿಗೆ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.