ADVERTISEMENT

ಕಲಬುರಗಿ | ಲೋಕ ಅದಾಲತ್: ಒಂದಾದ ಆರು ಜೋಡಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 16:12 IST
Last Updated 13 ಜುಲೈ 2024, 16:12 IST
ಕಲಬುರಗಿಯ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ದಂಪತಿಯೊಬ್ಬರು ನ್ಯಾಯಾಧೀಶರು, ವಕೀಲರ ಸಮ್ಮುಖದಲ್ಲಿ ಒಂದಾದರು –ಪ್ರಜಾವಾಣಿ ಚಿತ್ರ
ಕಲಬುರಗಿಯ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ದಂಪತಿಯೊಬ್ಬರು ನ್ಯಾಯಾಧೀಶರು, ವಕೀಲರ ಸಮ್ಮುಖದಲ್ಲಿ ಒಂದಾದರು –ಪ್ರಜಾವಾಣಿ ಚಿತ್ರ   

ಕಲಬುರಗಿ: ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಅಂಗವಾಗಿ ಶನಿವಾರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ರಾಜಿ ಸಂಧಾನದ ಮೂಲಕ 85,727 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಕುಟುಂಬ ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರು ಜೋಡಿಗಳು ಒಂದಾದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷಕ್ಷೆ ಎಸ್‌.ನಾಗಶ್ರೀ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ್ ನವಲೆ ಅವರು ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅವರ ವಕೀಲರ ಸಮಕ್ಷಮ ಸಂಧಾನದ ಮೂಲಕ ವಿಲೇವಾರಿ ಮಾಡಿದರು.

ಇತರೆ ನ್ಯಾಯಾಲಯಗಳಲ್ಲಿ ಅಲ್ಲಿನ ನ್ಯಾಯಾಧೀಶರು ಮೆಗಾ ಲೋಕ ಅದಾಲತ್ ನಡೆಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಿದರು. ಈ ವೇಳೆ ಒಟ್ಟಾರೆ ₹ 52.55 ಕೋಟಿ ಮೊತ್ತವನ್ನು ಸಂತ್ರಸ್ತರಿಗೆ ಪಾವತಿಸುವಂತೆ ಲೋಕ ಅದಾಲತ್ ಸಂಬಂಧಪಟ್ಟವರಿಗೆ ಆದೇಶಿಸಿತ್ತು. ಕುಟುಂಬ ನ್ಯಾಯಾಲಯಕ್ಕೆ ಸಂಬಂಧಿಸಿದ 6 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. 10 ವರ್ಷಗಳಿಗಿಂತ ಹೆಚ್ಚು ಅವಧಿಯ ಐದು ಪ್ರಕರಣಗಳನ್ನು ರಾಜಿ ಮಾಡಿಸಲಾಯಿತು.

ADVERTISEMENT

ಅದಾಲತ್‌ನಲ್ಲಿ ಸಿವಿಲ್ ದಾವೆಗಳು, ಮೋಟಾರು ವಾಹನ, ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ಬ್ಯಾಂಕ್‍ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟಾರೆ 85,727 ಪ್ರಕರಣಗಳು ಇತ್ಯರ್ಥಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.