ADVERTISEMENT

ಕಲಬುರಗಿ: ವಿವಾದಕ್ಕೆ ಕಾರಣವಾದ ನಿರಾಣಿ ಹೇಳಿಕೆ

ಚಂದು ಪಾಟೀಲಗೆ ಟಿಕೆಟ್; ಮಾಲೀಕಯ್ಯ ಗುತ್ತೇದಾರ ಖಂಡನೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 16:22 IST
Last Updated 26 ಜನವರಿ 2023, 16:22 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಕಲಬುರಗಿ: ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಈ ಬಾರಿ ಹಾಲಿ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ ಅವರಿಗೇ ಟಿಕೆಟ್ ನೀಡಲಾಗುವುದು ಎಂದು ಕಲಬುರಗಿಯ ಸಭೆಯೊಂದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಸಚಿವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

ಬುಧವಾರ ಕಲಬುರಗಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಸಭೆಯೊಂದರಲ್ಲಿ, ಚಂದು ಪಾಟೀಲ ಅವರು ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದು, ಈ ಬಾರಿ ಉತ್ತಮ ಸಿದ್ಧತೆ ಮಾಡಿಕೊಂಡಿದ್ದು, ಟಿಕೆಟ್ ಅವರಿಗೇ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು.

ಸಚಿವರ ಮಾತಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕ‌ಯ್ಯ ಗುತ್ತೇದಾರ, ‘ಬಿಜೆಪಿ ಒಂದು ಶಿಸ್ತಿನ ಪಕ್ಷವಾಗಿದ್ದು, ಯಾವ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಮಾಡಬೇಕು ಎಂಬ ಬಗ್ಗೆ ಚುನಾವಣೆ ಪೂರ್ವ ಸರ್ವೆ ನಡೆಸಿ ಪಕ್ಷದ ವರಿಷ್ಠರು ಅಂತಿಮವಾಗಿ ಟಿಕೆಟ್ ಘೋಷಣೆ ಮಾಡಲಿದ್ದಾರೆ. ಅದಕ್ಕೂ ಮುನ್ನವೇ ಚಂದು ಪಾಟೀಲ ಅವರಿಗೆ ಟಿಕೆಟ್ ಸಿಗಲಿದೆ ಎಂದು ಸಚಿವರು ಹೇಳಿದ್ದು ಖಂಡನೀಯ. ಒಬ್ಬ ಕ್ಯಾಬಿನೆಟ್ ಸಚಿವರಾಗಿ ಅವರು ಇಂತಹ ಹೇಳಿಕೆ ನೀಡಬಾರದಿತ್ತು. ಈ ಬಾರಿ ಅವರಿಗೇ ಟಿಕೆಟ್ ಸಿಗುತ್ತದೆ ಎಂಬುದು ಖಾತರಿ ಇಲ್ಲ. ಅಫಜಲಪುರ ಕ್ಷೇತ್ರದಿಂದ ನನಗೆ ಟಿಕೆಟ್ ಖಚಿತ ಎಂದು ನಾನೂ ಹೇಳುತ್ತಿಲ್ಲ. ಅದನ್ನು ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.

ADVERTISEMENT

ಮಾಲೀಕಯ್ಯ ಮಾತಿಗೆ ಪ್ರತಿಕ್ರಿಯೆ ನೀಡಿದ ಸಚಿವ ಮುರುಗೇಶ ನಿರಾಣಿ, ‘ಕಳೆದ ಬಾರಿ ಅಲ್ಪ ಮತಗಳ ಅಂತರದಿಂದ ಚಂದು ಪಾಟೀಲ ಸೋಲು ಕಂಡಿದ್ದರಿಂದ ಅವರಿಗೇ ಟಿಕೆಟ್ ಕೊಡುವುದು ಸೂಕ್ತ ಎಂದಿದ್ದೇನೆಯೇ ಹೊರತು ಟಿಕೆಟ್ ಘೋಷಣೆ ಮಾಡಿಲ್ಲ. ಅಲ್ಲದೇ, ಚಂದು ಪಾಟೀಲ ಕಳೆದ ನಾಲ್ಕೂವರೆ ವರ್ಷಗಳಿಂದ ಕ್ಷೇತ್ರದಲ್ಲಿ ಓಡಾಡಿ ಸಿದ್ಧತೆ ಮಾಡಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಕೊಟ್ಟರೆ ಸೂಕ್ತ ಎಂದು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ಬುಧವಾರ ಚಿತ್ತಾಪುರಕ್ಕೆ ತೆರಳಿದ ಸಂದರ್ಭದಲ್ಲಿ ನಾನು ಯಾರ ಹೆಸರನ್ನೂ ಘೋಷಿಸಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.