
ಕಲಬುರಗಿ: ‘ಆರ್‌ಎಸ್‌ಎಸ್ ವಿರುದ್ಧ ಮಾತು ಮುಂದುವರಿಸಿದರೆ ಆರ್‌ಎಸ್‌ಎಸ್ ಕಾರ್ಯಕರ್ತರು ಸಚಿವ ಪ್ರಿಯಾಂಕ್ ಖರ್ಗೆ ಮನೆಗೂ ಬರಬಹುದು’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ನಗರದ ಬ್ರಹ್ಮಪುರ ಠಾಣೆಯಲ್ಲಿ ಗುರುವಾರ ಎಫ್‌ಐಆರ್ ದಾಖಲಾಗಿದೆ.
‘ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಫೋನ್ ಕರೆಗಳು ಬಂದಿರಬಹುದು. ಇದೇ ರೀತಿ ಮಾತು ಮುಂದುವರಿಸಿದರೆ ಆರ್‌ಎಸ್‌ಎಸ್ ಕಾರ್ಯಕರ್ತರು ಅವರ ಮನೆಗೂ ಬರಬಹುದು. ಎಚ್ಚರಿಕೆಯಿಂದ ಇದ್ದು, ಆರ್‌ಎಸ್‌ಎಸ್‌ಗೆ ಕ್ಷಮೆ ಕೇಳಬೇಕು’ ಎಂದು ಇತ್ತೀಚೆಗೆ ಮಣಿಕಂಠ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದರು.
‘ಸಚಿವರಿಗೆ ಜೀವ ಬೆದರಿಕೆ ಹಾಕಿರುವ ಮಣಿಕಂಠ ರಾಠೋಡ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕಲಬುರಗಿ ಹೀರಾಪುರ ನಿವಾಸಿ ಸಿದ್ಧಾರೂಢ ಕಾಂಬಳೆ ಪೊಲೀಸರಿಗೆ ದೂರು ನೀಡಿದ್ದರು. ನ್ಯಾಯಾಲಯದ ಆದೇಶದಂತೆ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.